Advertisement

ಬಿತ್ತನೆ ಬೀಜ-ಗೊಬ್ಬರ ದಾಸ್ತಾನು ಮಾಡಿ

01:25 PM May 08, 2022 | Team Udayavani |

ಗದಗ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಸರಾಗವಾಗಿ ಸಾಗಲು ಅನುವಾಗುವಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಚರಂಡಿ, ನಾಲೆ ಹಾಗೂ ರಾಜಕಾಲುವೆಗಳನ್ನು ಕೂಡಲೇ ಸ್ವತ್ಛಗೊಳಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ತಮ್ಮ ವ್ಯಾಪ್ತಿಯ ಚರಂಡಿ, ನಾಲೆ ಹಾಗೂ ರಾಜಕಾಲುವೆಗಳನ್ನು ಸ್ವಚ್ಛಗೊಳಿಸಲು ಕ್ರಿಯಾ ಯೋಜನೆ ತಯಾರಿಸಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಡಳಿತ ಭವನದ ವಿಡಿಯೋ ಕಾನರನ್ಸ್‌ ಸಭಾಂಗಣದಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮು ಆರಂಭವಾಗುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡುವುದರ ಮೂಲಕ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಬೇಕೆಂದು ಸೂಚನೆ ನೀಡಿದರು.

ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ನಿಖರವಾದ ವರದಿ ಪಡೆದು ಪರಿಹಾರ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಬೇಕು. ಹಾನಿಗೊಳಗಾದ ಮನೆಗಳ ನಿಖರವಾದ ವರದಿಯನ್ನು 24 ಗಂಟೆಯೊಳಗಾಗಿ ಗ್ರಾಮ ಲೆಕ್ಕಿಗರಿಂದ ಪಡೆದುಕೊಂಡು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲು ತಹಶೀಲ್ದಾರ್‌ ರಿಗೆ ಸೂಚನೆ ನೀಡಿದರು.

ತಹಶೀಲ್ದಾರ್‌ ಕಚೇರಿಯಲ್ಲಿನ ನ್ಯಾಯಾಲಯ ಪ್ರಕರಣ, ಭೂ ಪರಿವರ್ತನೆ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕಾರ್ಯದಲ್ಲಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಡಿಲು ಹಾಗೂ ಉಷ್ಣ ಗಾಳಿಯಿಂದ ರಕ್ಷಿಸಿಕೊಳ್ಳುವ ಕುರಿತು ತಹಶೀಲ್ದಾರ್‌ರು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆ ರೂಪಿಸಿ ಕಾರ್ಯಗತ ಮಾಡುವಂತೆ ಸೂಚನೆ ನೀಡಿದರು.

Advertisement

ಸಂಭವನೀಯ ಕೋವಿಡ್‌ ನಾಲ್ಕನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಪೂರ್ವ ತಯಾರಿ ಬಗ್ಗೆ ಚರ್ಚಿಸಿದ ಡಿಸಿ, ನೋಡೆಲ್‌ ಅಧಿಕಾರಿಗಳು ಜಿಲ್ಲೆಯಲ್ಲಿನ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌, ಆಮ್ಲಜನಕ ಉತ್ಪಾಧನಾ ಘಟಕ, ಆಮ್ಲಜನಕ ಸಾಂಧ್ರಕಗಳು ಹಾಗೂ ಹಾಸಿಗೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಲಭ್ಯಗಳ ಕುರಿತು ವರದಿ ನೀಡುವಂತೆ ನಿರ್ದೇಶನ ನೀಡಿದರು. 12-14 ವಯೋಮಾನದ ಮಕ್ಕಳಿಗೆ ಎರಡನೇ ಡೋಸ್‌ ಲಸಿಕಾಕರಣ ಪೂರ್ಣಗೊಳಿಸಬೇಕು. ಕೋವಿಡ್‌ ಮುಂಜಾಗ್ರತಾ ಡೋಸ್‌ ಲಸಿಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಲಸಿಕಾಕರಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಆಯುಷ್ಮಾನ ಆರೋಗ್ಯ ಕರ್ನಾಟಕ ಕಾರ್ಡ್‌ಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿನ 14, 15ನೇ ಹಣಕಾಸು ಹಾಗೂ ಪರಿಶಿಷ್ಟ ಜಾತಿ, ಪಂಗಡ ಉಪ ಹಂಚಿಕೆ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪಂಗಡ ಉಪ ಹಂಚಿಕೆ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಅದೇ ಆರ್ಥಿಕ ಸಾಲಿನಲ್ಲಿ ಅನುದಾನ ಬಳಸಿ, ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ತಂತ್ರಾಂಶದಲ್ಲಿ ದಾಖಲಿಸಬೇಕು. ಕಳೆದ ಆರ್ಥಿಕ ಸಾಲಿನಲ್ಲಿ ಬಿಡುಗಡೆಯಾದ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಪ್ರಸಕ್ತ ಸಾಲಿನ ಮೊದಲ ತ್ರೆ„ಮಾಸಿಕದೊಳಗಾಗಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಮ್ಮ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ವಿದ್ಯುತ್‌ ವ್ಯವಸ್ಥೆ ಮಾಡಬೇಕು. ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ನಿವೇಶನ ಒದಗಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಮಳಿಗೆಗಳ ಹರಾಜು ಕುರಿತಂತೆ ಸರ್ಕಾರದ ಮಾರ್ಗಸೂಚಿಗಳನ್ವಯ ಶೀಘ್ರವೇ ಕ್ರಮ ಕೈಗೊಳ್ಳುವುದರ ಜೊತೆಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈ ತಿಂಗಳ ಅಂತ್ಯದೊಳಗಾಗಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲು ತಿಳಿಸಿದರು.

ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಾಣ ಕಾರ್ಯದಲ್ಲಿ ಇದುವರೆಗೆ ಮನೆ ನಿರ್ಮಾಣ ಕಾರ್ಯ ಆರಂಭವಾಗದೇ ಇರುವ ಕುರಿತು ವರದಿ ಸಲ್ಲಿಸಲು ತಿಳಿಸಿದ ಅವರು, ಈ ವಿಷಯದಲ್ಲಿ ಉದಾಸೀನ ಮನೊಭಾವ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ ಕುಮಾರ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ ನುಚ್ಚಿನ, ಭೂ ದಾಖಲೆಗಳ ಉಪನಿರ್ದೇಶಕ ಎಂ.ರವಿಕುಮಾರ, ತಹಶೀಲ್ದಾರ್‌ರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಅಧಿ ಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next