ಗದಗ: ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಜರುಗಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆ ಪ್ರಾರಂಭವಾಗುವಂತಹ ಸಂದರ್ಭದಲ್ಲಿ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಕೃತಕ ಅಭಾವ ಸೃಷ್ಟಿಯಾಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮಾಹಿತಿ ಪಡೆದು ವರದಿ ಸಲ್ಲಿಸಬೇಕು. ಬೆಳೆವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು. ಪ್ರಧಾನಮಂತ್ರಿ ಜನಧನ ಯೋಜನೆಯಡಿ ಬ್ಯಾಂಕ್ ಖಾತೆಗೆ 500 ರೂ. ಜಮೆ ಆಗುತ್ತಿದೆ. ಆದರೆ ಕರ್ಣಾಟಕ ಬ್ಯಾಂಕ್‌ಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ ಕಾರಣದಿಂದಾಗಿ ರಾಜ್ಯಾದ್ಯಂತ ಮಹಿಳೆಯರ ಖಾತೆಗೆ ಹಣ ಜಮೆ ಆಗಿಲ್ಲ. ಶೀಘ್ರವೇ ಈ ದೋಷವನ್ನು ನಿವಾರಿಸಿ, ಕರ್ಣಾಟಕ ಬ್ಯಾಂಕ್‌ನಲ್ಲಿ ಜನಧನ ಖಾತೆ ಹೊಂದಿರುವ ಮಹಿಳೆಯರಿಗೆ ಹಣ ದೊರಕುವಂತೆ ಕ್ರಮ ಜರುಗಿಸಬೇಕು. ಗದಗ ತಾಲೂಕಿನ ಕೆಲ ಭಾಗಗಳಲ್ಲಿ ಪಿಂಚಣಿ ಯೋಜನೆಗಳು ಸ್ಥಗಿತಗೊಂಡಿದ್ದು, ಶೀಘ್ರವೇ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಸೂಚಿಸಿದರು. ಕಳೆದ ವರ್ಷ ಉಂಟಾದ ನೆರೆಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಿರುವುದು, ನಬಾರ್ಡ್ ಯೋಜನೆಯಡಿ ಗ್ರಾಮೀಣಾಭಿವೃದ್ಧಿ, ರಸ್ತೆ ನಿರ್ಮಾಣ ಸೇರಿದಂತೆ ಇನ್ನಿತರೆ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ| ಆನಂದ ಕೆ., ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.