ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಪರವಾಗಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಎದುರು ವಕಾಲತ್ತು ವಹಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ ಎಐಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಷ್ಮಿತಾ ದೇವ್ ಜತೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸುಮಾರು 15 ನಿಮಿಷ ಮಾತುಕತೆ ನಡೆಸಿದ್ದಾರೆ.
ಪಕ್ಷದಲ್ಲಿ ಕಡೆಗಣಿಸಿರುವುದಕ್ಕೆ ಬೇಸರಗೊಂಡು ತಮ್ಮ ತಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ. ಅವರಿಗೆ ನ್ಯಾಯ ಕೊಡಿಸಬೇಕು ಎಂದು ಸೌಮ್ಯಾ ರೆಡ್ಡಿ , ಸೋನಿಯಾ ಗಾಂಧಿ ಎದುರು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನನ್ನ ರಾಜೀನಾಮೆ ಅಂಗೀಕಾರ ಕುರಿತು ವಿಧಾನಸಭಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನನಗೆ ಯಾವುದೇ ಸಚಿವ ಸ್ಥಾನ, ಉಪ ಮುಖ್ಯಮಂತ್ರಿ ಪಟ್ಟವೂ ಬೇಡ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸ್ನೇಹಿತರಾಗಿರುವುದರಿಂದ ಭೇಟಿ ಮಾಡಿದ್ದಾರೆ.
-ರಾಮಲಿಂಗಾರೆಡ್ಡಿ, ಮಾಜಿ ಸಚಿವ