ಚೆನ್ನೈ: ಕೋವಿಡ್ 19 ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಈಗ ಜೀವರಕ್ಷಕ ಸಪೋರ್ಟ್ ನಲ್ಲಿದ್ದು, ವೈದ್ಯರು ಅವರ ಆರೋಗ್ಯವನ್ನು ಪರಿಶೀಲಿಸುತ್ತಿದ್ದಾರೆ. ಆಗಸ್ಟ್ 13ರ (2020)ರ ತಡರಾತ್ರಿ ಎಸ್ ಪಿಬಿ ಅವರ ಆರೋಗ್ಯ ಗಂಭೀರವಾಗಿತ್ತು ಎಂದು ವರದಿ ತಿಳಿಸಿದೆ.
ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74ವರ್ಷ) ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಎಸ್ ಪಿಬಿ ಅವರು ತಮ್ಮ ಫೇಸ್ ಬುಕ್ ನಲ್ಲಿ ವಿಡಿಯೋವನ್ನು ಶೇರ್ ಮಾಡುವ ಮೂಲಕ ಆಗಸ್ಟ್ 5ರಂದು ಖಚಿತಪಡಿಸಿದ್ದರು.
16ಕ್ಕೂ ಅಧಿಕ ಭಾಷೆಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಂಚಿಕೊಂಡಿರುವ ವಿಡಿಯೋ ಸಂದೇಶದಲ್ಲಿ, ತನಗೆ ಕೋವಿಡ್ 19 ಸೋಂಕಿನ ಸಣ್ಣ ಪ್ರಮಾಣದ ಲಕ್ಷಣ ಕಾಣಿಸಿಕೊಂಡಿರುವುದಾಗಿ ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ತಾನು ಸ್ವಯಂ ಆಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಯೊಂದಿಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಯಾಕೆಂದರೆ ಕುಟುಂಬದ ಇತರ ಸದಸ್ಯರಿಗೆ ಸಮಸ್ಯೆಯಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದರು.