ಲಕ್ನೋ: ವಂಚನೆ ಪ್ರಕರಣದಲ್ಲಿ ಸುಮಾರು 2 ವರ್ಷಗಳ ಕಾಲ ಜೈಲಿನಲ್ಲಿದ್ದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಶುಕ್ರವಾರ (ಮೇ 20) ಸೀತಾಪುರ್ ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ
ನನ್ನ ತಂದೆಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ ಎಂದು ಅಜಂ ಖಾನ್ ಪುತ್ರ ಅಬ್ದುಲ್ಲಾ ಖಾನ್ ತಂದೆ ಅಜಂ ಖಾನ್ ಬಿಡುಗಡೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು. ಇಂದು ಬೆಳಗ್ಗೆ ಮಕ್ಕಳಾದ ಅಬ್ದುಲ್ಲಾ ಖಾನ್ ಮತ್ತು ಅದೀಬ್ ಖಾನ್ ಸೀತಾಪುರ್ ಜಿಲ್ಲಾ ಕಾರಾಗೃಹಕ್ಕೆ ಬಂದಿದ್ದು, ತಂದೆಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಉತ್ತಪ್ರದೇಶದ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ ಅಜಂ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಸುಪ್ರೀಂಕೋರ್ಟ್ ನ ಜಸ್ಟೀಸ್ ಎಲ್ ನಾಗೇಶ್ವರ ರಾವ್, ಜಸ್ಟೀಸ್ ಬಿಆರ್ ಗವಾಯಿ ಹಾಗೂ ಜಸ್ಟೀಸ್ ಎಎಸ್ ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಎರಡು ವಾರದೊಳಗೆ ಸಂಬಂಧಪಟ್ಟ ಸ್ಥಳೀಯ ಕೋರ್ಟ್ ನಲ್ಲಿ ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ.
ಮಂಗಳವಾರ ಅಜಂ ಖಾನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಉತ್ತರಪ್ರದೇಶದ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.