Advertisement

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಅಧಿಕಾರಿಗಳ ಜತೆ ಕಾಗೇರಿ ಸಭೆ

03:29 PM Dec 12, 2022 | Team Udayavani |

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನ ಮಂಡಲ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಸತಿ, ಊಟ, ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿದಾಗ ಇಡೀ ಅಧಿವೇಶನ ಸುಸೂತ್ರವಾಗಿ ನಡೆಯಲಿದೆ‌. ಮುಖ್ಯಮಂತ್ರಿ, ಸಚಿವರು, ಶಾಸಕರು, ಉನ್ನತಮಟ್ಟದ ಅಧಿಕಾರಿಗಳು ಸೇರಿದಂತೆ ಇಡೀ ವ್ಯವಸ್ಥೆಯೇ ಇಲ್ಲಿ ಇರುವುದರಿಂದ ವಸತಿ, ಊಟೋಪಹಾರದ ಅತ್ಯುತ್ತಮ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ನಿಯಮಿತವಾಗಿ ಆರೋಗ್ಯ ತಪಾಸಣೆ ಹಾಗೂ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ವೈದ್ಯರು ಮತ್ತು ಸಿಬ್ಬಂದಿ ತಂಡವನ್ನು ನಿಯೋಜಿಸಬೇಕು. ಅಗತ್ಯಬಿದ್ದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್ ಆಯುಕ್ತರಿಗೆ ಸಭಾಧ್ಯಕ್ಷರಾದ ಕಾಗೇರಿ ಅವರು ನಿರ್ದೇಶನ ನೀಡಿದರು.

Advertisement

ಜನರ ಅಪೇಕ್ಷೆಯಂತೆ ಉತ್ತಮ ರೀತಿಯಲ್ಲಿ ಅಧಿವೇಶನ ನಡೆಸುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮನ್ನು ನಾವು ಭಾವನಾತ್ಮಕವಾಗಿ ತೊಡಗಿಸಿ ಕೊಳ್ಳಬೇಕಿದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕು ಎಂದು ಕಾಗೇರಿ ಹೇಳಿದರು.

ಇದನ್ನೂ ಓದಿ:ಮೋಪಾ ವಿಮಾನ ನಿಲ್ದಾಣಕ್ಕೆ ‘ಮನೋಹರ್’ ಎಂದು ಹೆಸರಿಟ್ಟ ಪ್ರಧಾನಿ ಮೋದಿ

ಅಧಿವೇಶನಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳು ಅಥವಾ ತಾಂತ್ರಿಕ ತೊಂದರೆಗಳು ಇದ್ದಲ್ಲಿ ಇಲಾಖೆಗಳ ಮುಖ್ಯಸ್ಥರಿಗೆ ವರದಿ ನೀಡಬೇಕು. ಇದರಿಂದ ಸೂಕ್ತ ಕ್ರಮ ತೆಗೆದುಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿವೇಶನ ಸಿದ್ಧತೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಕಾರ್ಯನಿರ್ವಹಣೆ ಮತ್ತು ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಪ್ರತಿಯೊಂದು ವಸತಿಗೃಹಗಳಿಗೆ ಹಾಗೂ ಸಚಿವರುಗಳಿಗೆ ಸಂಪರ್ಕಾಧಿಕಾರಿಗಳನ್ನು ನಿಯೋಜಿಸಲಾಗಿದೆ.  ವೈದ್ಯಕೀಯ ತಪಾಸಣೆ ಹಾಗೂ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು 16 ಕಡೆಗಳಲ್ಲಿ ಪ್ರತ್ಯೇಕ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭದ್ರತೆ ಹಾಗೂ ಪಾರ್ಕಿಂಗ್ ಮತ್ತಿತರ ವಿಷಯಗಳ ಕುರಿತು ಪೊಲೀಸ್ ಆಯುಕ್ತರಾದ ಎಂ.ಬಿ.ಬೋರಲಿಂಗಯ್ಯ ಅವರು ಮಾಹಿತಿ ನೀಡಿದರು.

ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next