Advertisement

ಬಿಜೆಪಿ ಅವಿಶ್ವಾಸ ಮಂಡನೆಗೆ ಸ್ಪೀಕರ್‌ ನಕಾರ

11:19 PM Jul 15, 2019 | Team Udayavani |

ಬೆಂಗಳೂರು: ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿರುವುದರಿಂದ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವಂತೆ ಬಿಜೆಪಿಯವರು ಮಾಡಿದ್ದ ಮನವಿಯನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ತಿರಸ್ಕರಿಸಿದ್ದಾರೆ.

Advertisement

ಸೋಮವಾರ ಬೆಳಗ್ಗೆಯೇ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಸ್ಪೀಕರ್‌ ರಮೇಶ್‌ಕುಮಾರ್‌ ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರ ಅಲ್ಪ ಮತಕ್ಕೆ ಕುಸಿದಿದ್ದು, ಸರ್ಕಾರದ ವಿರುದ್ಧ ಸೋಮವಾರವೇ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಆದರೆ, ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿಯೇ ವಿಶ್ವಾಸಮತ ಯಾಚನೆಗೆ ಸಮಯ ಕೇಳಿರುವುದರಿಂದ ಅವಿಶ್ವಾಸ ಮಂಡನೆಗೆ ಅವಕಾಶ ನೀಡಲು ಬರುವುದಿಲ್ಲ ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ಬಿಜೆಪಿ ನಿಯೋಗಕ್ಕೆ ತಿಳಿಸಿದ್ದಾರೆಂದು ತಿಳಿದು ಬಂದಿದೆ.

ಆ ನಂತರ ವಿಧಾನಸಭಾಧ್ಯಕ್ಷ ರಮೇಶ್‌ಕುಮಾರ್‌ ನೇತೃತ್ವದಲ್ಲಿ ನಡೆದ ಕಲಾಪ ಸಲಹಾ ಸಮಿತಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೋರಿರುವ ವಿಶ್ವಾಸ ಮತ ಯಾಚನೆಗೆ ದಿನಾಂಕ ನಿಗದಿ ಮಾಡುವ ಕುರಿತು ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ವಾದ ಪ್ರತಿ ವಾದ ನಡೆದಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯವರು ಸೋಮವಾರವೇ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆ ಮಾಡಬೇಕೆಂದು ಪಟ್ಟು ಹಿಡಿದಿದ್ದರೆಂದು ತಿಳಿದು ಬಂದಿದೆ. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ವಿಶ್ವಾಸ ಮತಯಾಚಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

Advertisement

ಸ್ಪೀಕರ್‌ ರಮೇಶ್‌ ಕುಮಾರ್‌ ಮಂಗಳವಾರ ರಾಜೀನಾಮೆ ನೀಡಿರುವ ರಾಜ್ಯದ ಶಾಸಕರ ಪ್ರಕರಣ ಸುಪ್ರೀಂ ಕೊರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿರುವುದರಿಂದ, ಸುಪ್ರೀಂಕೋರ್ಟ್‌ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಶ್ವಾಸಮತ ಯಾಚನೆಗೆ ಸಮಯ ನೀಡುವುದಾಗಿ ತಿಳಿಸಿದ್ದಾರೆ.

ಸ್ಪೀಕರ್‌ ರಮೇಶ್‌ ಕುಮಾರ್‌ ಸಲಹೆಯನ್ನೂ ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ. ಆದರೆ, ಬಿಜೆಪಿಯವರು ವಿಶ್ವಾಸ ಇಲ್ಲದ ಸರ್ಕಾರ ಸದನದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ಗುರುವಾರದವರೆಗೂ ಯಾವುದೇ ಕಲಾಪದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಪಕ್ಷ ಬಿಜೆಪಿ ನಾಯಕರ ಸಲಹೆ ಮೇರೆಗೆ ಸ್ಪೀಕರ್‌ ರಮೇಶ್‌ಕುಮಾರ್‌, ಪ್ರತಿಪಕ್ಷದ ಅನುಪಸ್ಥಿತಿಯಲ್ಲಿ ಕಲಾಪ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಿ ಸದನವನ್ನು ಗುರುವಾರಕ್ಕೆ ಮುಂದೂಡಿದ್ದಾರೆ.

ಸರ್ಕಾರ ವಿಶ್ವಾಸ ಮತ ಯಾಚನೆಗೆ ಅವಕಾಶ ಕೇಳಿದೆ. ಗುರುವಾರ ವಿಶ್ವಾಸ ಮತ ಯಾಚನೆಗೆ ಅವಕಾಶ ಕಲ್ಪಿಸಿದ್ದಾರೆ. ಸಭೆಯ ನಿರ್ಧಾರವನ್ನು ನಾವು ಒಪ್ಪಿಕೊಂಡಿದ್ದೇವೆ. ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂಬ ವಿಶ್ವಾಸವಿದೆ.
-ಜೆ.ಸಿ. ಮಾದುಸ್ವಾಮಿ, ಬಿಜೆಪಿ ಶಾಸಕ

ವಿಶ್ವಾಸ ಮತ ಯಾಚನೆ ಮಾಡುವವರೆಗೂ ಯಾವುದೇ ಕಾರ್ಯಕಲಾಪ ನಡೆಯಬಾರದು ಎಂದು ಮನವಿ ಮಾಡಿದ್ದೆವು. ಎರಡು ದಿನ ಸದನ ಮುಂದೂಡಿದ್ದಾರೆ. ಗುರುವಾರ ಸರ್ಕಾರದ ಹಣೆ ಬರಹ ಗೊತ್ತಾಗಲಿದೆ.
-ಬಸವರಾಜ್‌ ಬೊಮ್ಮಾಯಿ, ಬಿಜೆಪಿ ಶಾಸಕ

ಗುರುವಾರ ವಿಶ್ವಾಸ ಮತ ಯಾಚನೆಗೆ ನಾವು ಒಪ್ಪಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಾಯಕರೂ ಒಪ್ಪಿದ್ದಾರೆ. ನಮಗೆ ಸರ್ಕಾರ ಉಳಿಯುವ ನಂಬಿಕೆ ಇರುವುದರಿಂದಲೇ ವಿಶ್ವಾಸ ಮತ ಯಾಚನೆಗೆ ಅವಕಾಶ ಕೋರಿದ್ದೇವೆ.
-ಸಿದ್ದರಾಮಯ್ಯ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next