ವಿಟ್ಲ: ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಜ.8ರ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.
ಬಳಿಕ ಮಾತನಾಡಿದ ಯು.ಟಿ.ಖಾದರ್, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಕಾರ್ಯಾಚರಣೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ವಿವರ ನೀಡಿದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು. ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಘಟನೆ ಹಿನ್ನಲೆ: ನಾರ್ಶ ನಿವಾಸಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಕಳೆದ ಶುಕ್ರವಾರ (ಜ.3) ರಾತ್ರಿ ಅವರ ಮನೆಗೆ ತಮಿಳುನಾಡು ರಿಜಿಸ್ಟ್ರೇಶನ್ ಹೊಂದಿರುವ ಮಾರುತಿ ಎರ್ಟಿಗಾ ಕಾರಿನಲ್ಲಿ ಆಗಮಿಸಿದ ದೈತ್ಯ ಶರೀರದ 6 ಮಂದಿಯ ತಂಡವೊಂದು ದಾಳಿ ನಡೆಸಿದಂತೆ ನಟಿಸಿದೆ. ನಾವು ಈಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡೂವರೆ ಗಂಟೆಗಳ ವರೆಗೆ ತನಿಖೆ ನಡೆಸಿದ ನಾಟಕ ಮಾಡಿ ಮನೆಯಲ್ಲಿ ಸಿಕ್ಕಿದ ಭಾರೀ ಮೊತ್ತವನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ವಶಪಡಿಸಿದ್ದ ಮನೆಯವರ ಮೊಬೈಲ್ ಫೋನ್ ಗಳು ಮನೆಯ ತಳ ಅಂತಸ್ತಿನ ರ್ಯಾಕ್ ನಲ್ಲಿ ಮಂಗಳವಾರ ಪತ್ತೆಯಾಗಿದೆ.
ಈ ಘಟನೆ ನಾಡಿನಾದ್ಯಂತ ದಿಗಿಲು ಹುಟ್ಟಿಸಿದೆ. ಪೊಲೀಸರು ದರೋಡೆಕೋರರ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದಾರೆ.