ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಆಸ್ಪದವಾಗದಂತೆ ಸೂಕ್ತ ನಿಗಾ ಹಾಗೂ ಕಟ್ಟುನಿಟ್ಟಿನ ಕ್ರಮ ಜರಗಿಸುವ ಉದ್ದೇಶ ದಿಂದ ಬುಧವಾರ ನಗರದಲ್ಲಿ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ವಿವಿಧ ವಿಭಾಗಗಳ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು.
ಮುಖ್ಯವಾಗಿ, ಕರ್ನಾಟಕದ ಗಡಿಭಾಗವಾದ ಕಾಸರ ಗೋಡು ಸಹಿತ ನೆರೆ ರಾಜ್ಯಗಳಿಂದ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬಾರದು. ಈ ಕಾರಣಕ್ಕೆ ಕೇರಳ ರಾಜ್ಯದ ಗಡಿಭಾಗಕ್ಕೆ ಸಂಬಂಧಪಟ್ಟಿರುವ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಜತೆಗೆ, ಐಜಿಪಿ, ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಅವರು ಸುದೀರ್ಘ ಸಭೆ ನಡೆಸಿ, ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಬಂದೋಬಸ್ತ್, ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಕೇರಳ ರಾಜ್ಯದ ಪರವಾಗಿ ಕಾಸರ ಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈಮನ್, ಗುಪ್ತಚರ ವಿಭಾಗದ ಪೊಲೀಸ್ ಅಧಿಕಾರಿಗಳು ಭಾಗ ವಹಿಸಿದ್ದರು. ಉಭಯ ರಾಜ್ಯಗಳ ರೈಲ್ವೇ, ಕೋಸ್ಟ್ ಗಾರ್ಡ್ ವಿಭಾಗಗಳ ಉನ್ನತ ಅಧಿಕಾರಿಗಳು ಕೂಡ ಸಭೆಯಲ್ಲಿ ಪಾಲ್ಗೊಂಡು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದ್ದಾರೆ.
ಗಡಿಭಾಗದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಜಿಲ್ಲೆಯಲ್ಲಿ ಶಾಂತ ರೀತಿಯಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯಲ್ಲಿಯೂ ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ನೆರೆಯ ಗಡಿ ಜಿಲ್ಲೆಯಾದ ಕಾಸರಗೋಡಿನ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
– ಟಿ.ಆರ್. ಸುರೇಶ್, ನಗರ ಪೊಲೀಸ್ ಆಯುಕ್ತ