ಮೈಸೂರು: ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯಲ್ಲಿ ಯಾವುದೇ ಸಂಕಷ್ಟ ಅಥವಾ ಕಠಿಣ ಪರಿಸ್ಥಿತಿ ಎದುರಾದರೂ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳದೆ ಎಲ್ಲಾ ಸನ್ನಿವೇಶಗಳನ್ನು ಧೈರ್ಯವಾಗಿ ಎದುರಿಸಬೇಕು ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.
ಮೈಸೂರು ಪುರಭವನದಲ್ಲಿ ಜಿಲ್ಲಾ ಗಾಣಿಗರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳು ವ್ಯಾಸಂಗದ ವೇಳೆ ಉತ್ತಮ ಶಿಕ್ಷಣ ಪಡೆಯುವಲ್ಲಿ ಗುರಿ ಇಟ್ಟುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುತ್ತಾ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಿರಿ ಎಂದು ಸಲಹೆ ನೀಡಿದರು.
ಜಾಗೃತರಾಗಿ: ಶಾಸಕ ನಾಗೇಂದ್ರ ಮಾತನಾಡಿ, ಹಿಂದುಳಿದ ವರ್ಗಗಳು ಒಗ್ಗಟ್ಟಿಲ್ಲದೆ ಚದುರಿ ಹೋಗಿದ್ದು, ಇದರಿಂದಾಗಿ ಹಿಂದುಳಿದ ವರ್ಗಗಳನ್ನು ಗಣನೆಗೆ ತೆಗೆದುಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿಯೊಂದು ಸಮುದಾಯಗಳು ಒಗ್ಗಟ್ಟಿನಿಂದ ಮುನ್ನಡೆದರೆ ಸರ್ಕಾರಗಳು ಈ ಸಮುದಾಯಗಳ ಅಭಿವೃದ್ಧಿಗೆ ಮುಂದಾಗಲಿದೆ.
ಯಾವುದೇ ಪಕ್ಷದ ಅಭ್ಯರ್ಥಿ ಗೆಲ್ಲಲು ಹಿಂದುವಳಿದ ವರ್ಗಗಳ ಕೊಡುಗೆ ಇದೆ. ಹೀಗಾಗಿ ಹಿಂದುಳಿದ ವರ್ಗಗಳ ಸಮುದಾಯದಗಳು ಈ ಬಗ್ಗೆ ಜಾಗೃತರಾಗಬೇಕಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಅಶ್ವಿನ್‌ಕುಮಾರ್, ಕೆ.ಮಹದೇವು ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಗಾಣಿಗ ಸಮುದಾಯ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಾಜಿ ಸಚಿವ ಹಾಗೂ ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ ಅಧ್ಯಕ್ಷ ಪುಟ್ಟಸ್ವಾಮಿ, ಗಾಣಿಗರ ಸಂಘದ ಜಿಲ್ಲಾಧ್ಯಕ್ಷ ಉಮೇಶ್, ಗೌರವಾಧ್ಯಕ್ಷ ಎನ್.ಪಾಪಣ್ಣ, ರಾಜಶೇಖರ್, ರಂಗರಾಜು, ಚನ್ನಕೇಶವ, ರಾಜಶೇಖರ್, ಅಶೋಕ, ಗೋವಿಂದರಾಜು ಮತ್ತಿತರರಿದ್ದರು.