ಮೈಸೂರು : ಕೋವಿಡ್ ಅಲೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿರುವ ಕಾರಣ ದಸರಾವನ್ನು ಮತ್ತೆ ವಿಜೃಂಭಣೆಯಿಂದ ನಡೆಸುವ ಸಂಬಂಧ ವಿವಿಧ ಕಾರ್ಯಕ್ರಮಗಳ ಪ್ರಾಯೋಜಕತ್ವ ವಹಿಸುವ ಮೂಲಕ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದಸರಾ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕುಗಳು ಹಾಗೂ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಇತರೆ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ತಮವಾಗಿ ಸ್ಪಂದನೆ: ಕೋವಿಡ್ ಅಲೆಯ ಸಂದರ್ಭದಲ್ಲಿ ಮೈಸೂರು ಜಿಲ್ಲೆಯ ಅನೇಕ ಕೈಗಾರಿಕೆಗಳು, ಎನ್‌ಜಿಒ, ಖಾಸಗಿ ಕಂಪನಿಗಳು ಸಾಮಾಜಿಕ ಕಳಕಳಿಯಿಂದ ಹಲವಾರು ರೀತಿಯಲ್ಲಿ ನೆರವಾಗಿವೆ. ಸಂಕಷ್ಟದಲ್ಲಿದ್ದವರಿಗೆ ಉತ್ತಮವಾಗಿ ಸ್ಪಂದಿಸಿದೆ ಎಂದು ಜಿಲ್ಲಾಧಿಕಾರಿಗಳು ಧನ್ಯವಾದ ತಿಳಿಸಿದರು.
ನಟರಿಗೆ ಆಹ್ವಾನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಮಾತನಾಡಿ, ಈ ಬಾರಿಯ ದಸರಾದಲ್ಲಿ ನಡೆಯುವ ಯುವ ದಸರಾ ಹಾಗೂ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಬಾಲಿವುಡ್ ನೈಟ್ ಹಾಗೂ ಸ್ಯಾಂಡಲ್ ವುಡ್ ನೈಟ್ ಎಂಬ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಸಂಗೀತಗಾರರನ್ನು ಅಥವಾ ನಟರನ್ನು ಆಹ್ವಾನಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.
ಪ್ರತಿದಿನ ಕಾರ್ಯಕ್ರಮಗಳು: ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ಮಾತನಾಡಿ, ದಸರಾ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಮಾಡಿದರೆ ಅಧಿಕೃತವಾಗಿ ಪ್ರಾಯೋಜಕರು ಎಂದು ಗುರುತಿಸಲಾಗುತ್ತದೆ. ದಸರಾ ಸಂಬಂಧ 16 ಉಪಸಮಿತಿಗಳನ್ನು ರಚಿಸಲಾಗಿದೆ. ಈ ಉಪಸಮಿತಿಗಳ ವ್ಯಾಪ್ತಿಯಲ್ಲಿ ಪ್ರತಿದಿನ ಕಾರ್ಯಕ್ರಮಗಳು ಜರುಗಲಿವೆ ಎಂದರು. ಈ ಬಾರಿಯ ದಸರಾದಲ್ಲಿ ಯುವ ಸಂಭ್ರಮ, ಯುವ ದಸರಾ, ರೈತ ದಸರಾ, ಕ್ರೀಡಾ ದಸರಾ ಸೇರಿದಂತೆ ಹಲವಾರು ಕಾರ್ಯಕ್ರಮ ಜರುಗಲಿದೆ. ಪ್ರಾಯೋಜಕತ್ವ ನೀಡುವವರು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಅಥವಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರನ್ನು ಸಂಪರ್ಕಿಸಿ ಡಿ.ಡಿ ಅಥವಾ ಚೆಕ್ ಗಳನ್ನು ನೀಡಿ ಸ್ವೀಕೃತಿ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ, ಡಿಸಿಪಿ ಗೀತಾ ಪ್ರಸನ್ನ ಹಾಗೂ ಇತರರು ಭಾಗವಹಿಸಿದ್ದರು.