ಭಾಲ್ಕಿ: ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ ಎಂದು ಶಾಸಕ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ಪಟ್ಟಣದ ದಿವ್ಯಜ್ಯೋತಿ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ್ಯದಿಂದಲೇ ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅತ್ಯವಶ್ಯಕವಾಗಿವೆ. ಶಿಕ್ಷಕರು ಮಕ್ಕಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಉತ್ತಮ ವೇದಿಕೆ ಕಲ್ಪಿಸಿಕೊಡಬೇಕು. ಮಾಹಿತಿ ತಂತ್ರಜ್ಞಾನ ಬಳಕೆಯಿಂದ ಮಕ್ಕಳು ದೈಹಿಕವಾಗಿ ಕುಂಠಿತರಾಗುತ್ತಿದ್ದಾರೆ. ಅವರ ಆರೋಗ್ಯ ಚನ್ನಾಗಿರುವ ನಿಟ್ಟಿನಲ್ಲಿ ಅವರಿಗೆ ಕ್ರೀಡಯೆಲ್ಲಿ ಭಾಗವಹಿಸಲು ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಕ್ರೀಡೆಗಳಿಂದ ಮಕ್ಕಳಲ್ಲಿ ಶಿಸ್ತು ಮತ್ತು ಸ್ಪರ್ಧಾ ಮನೋಭಾವ ಬೆಳೆಯುತ್ತದೆ. ಕ್ರೀಡಾಕೂಟವು ಮಕ್ಕಳಲ್ಲಿ ಸೃಜನಶೀಲತೆ ಮತ್ತು ಪ್ರತಿಭೆ ಅನಾವರಣ ಮಾಡುವ ವೇದಿಕೆಯಾಗಿದೆ. ತಾಲೂಕಿನಲ್ಲಿಯ ಎಲ್ಲ ಶಾಲೆಗಳಲ್ಲಿಯೂ ಆಟದ ಮೈದಾನ ಸೇರಿದಂತೆ ಕ್ರೀಡಾ ಚಟುವಟಿಕೆ ನಡೆಸಲು ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುತ್ತೇನೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಅಶೋಕ ಗಾಯಕವಾಡ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಮಡಿವಾಳಪ್ಪ ಮಂಗಲಗಿ, ಫಾದರ ರೂಕಿ ಡಿಸೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತು ಕಾಟಕರ, ರಾಜಕುಮಾರ ಜೊಳದಪಕೆ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಷ ಇಟಗೆ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕೀರ್ತಿಲತಾ ಹೊಸಾಳೆ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್, ಇಸಿಒ ಜಯರಾಮ ಬಿರಾದಾರ, ಸಹದೇವ.ಜಿ, ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಇದ್ದರು.