ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಂತೆ ನರೇಗಾ ಯೋಜನೆಯಲ್ಲಿ ಗ್ರಾಮೀಣ ಭಾಗದಲ್ಲಿ ಕ್ರೀಡಾ ಅಂಕಣ ನಿರ್ಮಾಣಕ್ಕೆ ವೆಚ್ಚ ಹಾಗೂ ನಿಬಂಧನೆಗಳನ್ನು ಸೂಚಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ.
ಗ್ರಾಮೀಣ ಮತ್ತು ದೇಶಿಯ ಕ್ರೀಡೆಗಳನ್ನು ಉತ್ತೇಜಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜಡೆಯಡಿ ಸುಮಾರು 504 ಕೋಟಿ ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಅದರಂತೆ ಸ್ಥಳೀಯ ಅವಶ್ಯಕತೆ ಅನುಗುಣವಾಗಿ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಅಂದಾಜು ಪಟ್ಟಿ ಸಿದ್ದಪಡಿಸಿ ಸುತ್ತೋಲೆ ಹೊರಡಿಸಲಾಗಿದೆ.
ಗ್ರಾಮೀಣ ಭಾಗದಲ್ಲಿ ರನ್ನಿಂಗ್ ಟ್ರ್ಯಾಕ್, ಖೋಖೋ, ಕಬಡ್ಡಿ, ವಾಲಿಬಾಲ್, ಬ್ಯಾಸ್ಕೆಟ್ ಬಾಲ್ ಸೇರಿದಂತೆ ವಿವಿಧ ಕ್ರೀಡಾ ಅಂಕಣಗಳನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಸೂಚಿಸಿದೆ.
ಇದನ್ನೂ ಓದಿ: ಧ್ವನಿವರ್ಧಕಗಳಿಗೆ ನಿಯಮ; ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಆನಂದ್ ಸಿಂಗ್
Related Articles
ಕಬಡ್ಡಿ ಅಂಕಣ ನಿರ್ಮಾಣಕ್ಕೆ 2.60 ಲಕ್ಷ, ಖೋಖೋ ಅಂಕಣಕ್ಕೆ 3.30 ಲಕ್ಷ, ವಾಲಿಬಾಲ್ ಅಂಕಣಕ್ಕೆ 5.10 ಲಕ್ಷ, ಬ್ಯಾಸ್ಕೆಟ್ ಬಾಲ್ ಅಂಕಣಕ್ಕೆ 5.20 ಲಕ್ಷ , ರನ್ನಿಂಗ್ ಟ್ರ್ಯಾಕ್ ನಿರ್ಮಾಣಕ್ಕಾಗಿ 5 ಲಕ್ಷ ರೂಪಾಯಿ ಮೀಸಲಿಟ್ಟಿದ್ದು, ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗ ಅಥವಾ ಶಾಲೆ, ಕಾಲೇಜು ಮೈದಾನಗಳಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಪಡಿಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಗ್ರಾಮೀಣ ಮಟ್ಟದಿಂದಲೇ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದ ಸಚಿವ ಡಾ.ನಾರಾಯಣಗೌಡ ಅವರು, 2022 ರ ಬಜೆಟ್‌ನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಮಾನ್ಯ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಕ್ರೀಡಾ ಅಂಕಣ ಯೋಜನೆಯನ್ನು ಘೋಷಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ MNREGA ಯೋಜನೆಯಡಿ ಇಡೀ ಭಾರತ ದೇಶಕ್ಕೆ ಮಾದರಿಯಾದ ಕ್ರೀಡಾ ಅಂಕಣಗಳು ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸಿ ತರಬೇತಿ ನೀಡಬೇಕು ಎಂಬುದು ನಮ್ಮ ಸರ್ಕಾರದ ಕನಸು. ಆ ನಿಟ್ಟಿನಲ್ಲಿ ಗ್ರಾಮೀಣ ಪ್ರತಿಭೆಗಳ ಗುರುತಿಸಲು ಹಾಗೂ ಗ್ರಾಮೀಣ ಭಾಗದ ಪ್ರತಿಭೆಗಳು ಅಗತ್ಯ ತಯಾರಿ ಮಾಡಿಕೊಳ್ಳಲು ಕ್ರೀಡಾ ಅಂಕಣಗಳು ನೆರವಾಗಲಿವೆ. ಹಾಗಾಗಿ, ಕ್ರೀಡಾ ಅಂಕಣ ಯೋಜನೆಯನ್ನು ಪಂಚಾಯತ್ ಮಟ್ಟದಲ್ಲಿ ಸಮರ್ಥ ಜಾರಿಗೊಳಿಸಲಾಗುವುದು. ಈ ಮೂಲಕ ಗ್ರಾಮೀಣ ಭಾಗದ ಕ್ರೀಡೆಗಳು ಹಾಗೂ ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.