Advertisement

ಆ.29 ರಂದು ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಕ್ರೀಡಾಕೂಟ: ಸಚಿವ ಡಾ.ನಾರಾಯಣಗೌಡ

05:28 PM Aug 26, 2022 | Team Udayavani |

ಬೆಂಗಳೂರು: ಗ್ರಾಮೀಣ ಪ್ರತಿಭೆಗಳ ಅನಾವರಣಗೊಳಿಸಲು ಹಾಗೂ ದೇಶಿಯ ಕ್ರೀಡೆಗಳ ಉತ್ತೇಜನಕ್ಕೆ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗುತ್ತಿದ್ದು, ಆಗಸ್ಟ್29 ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

Advertisement

ರಾಜ್ಯದ ಗ್ರಾಮೀಣ ಹಾಗೂ ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ದೇಸಿ ಕ್ರೀಡೆಗಳಾದ ಕುಸ್ತಿ, ಕಬ್ಬಡ್ಡಿ, ಖೋಖೋ ಮತ್ತು ಎತ್ತಿನಬಂಡಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಷ್ಟ್ರೀಯ ಕ್ರೀಡಾ ದಿನವಾದ ಆಗಸ್ಟ್ 29 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಗ್ರಾಮೀಣ ಕ್ರೀಡೋತ್ಸವ ಆಯೋಜಿಸಲಾಗುತ್ತಿದ್ದು, 10 ಕೋಟಿ ರೂ ಅನುದಾನ ನೀಡಲಾಗಿದೆ. ದೇಶಿಯ ಕ್ರೀಡೆಗಳಿಗೆ, ಗ್ರಾಮೀಣ ಪ್ರತಿಭೆಗಳಿಗೆ ಉತ್ತೇಜನ ನೀಡಬೇಕು ಎಂಬುದು ನಮ್ಮ ಸರ್ಕಾರದ ಆಶಯ. ತಾಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಎಲೆ ಮರೆ ಕಾಯಿಯಂತಿದ್ದ ಎಷ್ಟೋ ಅರ್ಹ ಪ್ರತಿಭೆಗಳಿಗೆ ಅವಕಾಶ ಸಿಗಲಿದೆ. ಇದರಿಂದ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಅವಕಾಶ ದೊರೆಯುವಂತಾಗಲಿದೆ. ಹಾಗಾಗಿ ಗ್ರಾಮೀಣ ಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next