ವಿಧಾನಸಭೆ: ಬೈಂದೂರು ತಾಲೂಕಿನಲ್ಲಿ ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಕಾಯ್ದಿರಿಸಿರುವ 25 ಎಕರೆ ಜಮೀನು ನಮ್ಮ ಇಲಾಖೆಗೆ ಹಸ್ತಾಂತರಗೊಂಡ ತಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರೀಡಾ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಸರ್ವೆ ನಂಬರ್ 219ರಲ್ಲಿನ 40 ಎಕರೆ ಜಮೀನಿನ ಪೈಕಿ 25 ಎಕರೆ ಜಾಗವನ್ನು ಕಾಯ್ದಿರಿಸುವ ಬಗ್ಗೆ ಕ್ರೀಡಾ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕರು 2021ರ ಆ.3ರಂದು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈ ಜಾಗ ಡೀಮ್ಸ್ ಫಾರೆಸ್ಟ್ ಪಟ್ಟಿಯಲ್ಲಿ ಇರುವುದರಿಂದ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ನಕ್ಷೆ ತಯಾರಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಈಗ ಜಾಗ ಕ್ರೀಡಾ ಇಲಾಖೆಗೆ ಹಸ್ತಾಂತರವಾಗಬೇಕಕಿದೆ. ಜಮೀನು ನಮ್ಮ ಇಲಾಖೆಗೆ ಹಸ್ತಾಂತರಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದೇ ವೇಳೆ ಬೈಂದೂರು ತಾಲೂಕು ಕ್ರೀಡಾಂಗಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿಪಡಿಸುವ ಯೋಜನೆಗೆ ಸಂಬಂಧಿಸಿದಂತೆ ಸಲಹಾ ಸೇವೆ ಪಡೆಯಲು ವಹಿವಾಟು ಸಲಹೆಗಾರರಾಗಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಸಂಸ್ಥೆಯನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಸ್ಥಳ ಅಧ್ಯಯನ ಕೈಗೊಂಡು ಕಾರ್ಯಸಾಧ್ಯತೆ ವರದಿ ತಯಾರಿಕೆ ಹಂತದಲ್ಲಿದೆ.
ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿರುವುದರಿಂದ ಪ್ರತ್ಯೇಕವಾಗಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಸಚಿವರು ಮಾಹಿತಿ ನೀಡಿದರು.
ಆದರೆ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾಂಗಣ ಅಭಿವೃದ್ಧಿಯ ಸರ್ಕಾರದ ಯೋಜನೆಗೆ ಶಾಸಕ ಸುಕುಮಾರ್ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದರು.