ಬಳ್ಳಾರಿ: ಕೋವಿಡ್-19 ಸೋಂಕು ನಿಯಂತ್ರಣದ ವಿಚಾರದಲ್ಲಿ ಸಚಿವರುಗಳ ನಡುವೆ ಸಮನ್ವಯದ ಕೊರತೆಯಿದೆ, ತಮ್ಮನ್ನು ದೂರ ಇಡಲಾಗುತ್ತಿದೆ ಎಂಬ ಆರೋಪಗಳನ್ನು ಸಚಿವ ಶ್ರೀರಾಮುಲು ಅಲ್ಲಗಳೆದಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಸಚಿವರು, ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲಾ. ನಾವು ಒಂದು ಕುಟುಂಬದಂತೆ ಕೆಲಸ ಮಾಡುತ್ತಿದ್ದೇವೆ ಎಂದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ನಾನು ರಾಜ್ಯದ ಸ್ಥಿತಿಗತಿಗಳನ್ನು ನೋಡಿಕೊಳ್ಳುತ್ತಿದ್ದರೆ, ಕೆ. ಸುಧಾಕರ್ ಅವರಿಗೆ ಬೆಂಗಳೂರಿನ ಜವಾಬ್ದಾರಿ ನೀಡಲಾಗಿತ್ತು. ಸದ್ಯ ಸುಧಾಕರ್ ಅವರಿಗೆ ಸಮಸ್ಯೆ ಆಗಿದೆ. ಹಾಗಾಗಿ ಈಗ ಆರ್. ಅಶೋಕ್ ಅವರಿಗೆ ಬೆಂಗಳೂರಿನ ಜವಾಬ್ದಾರಿ ನೀಡಲಾಗಿದೆ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಬಳ್ಳಾರಿ ಬಂದಾಗ ನಾನು ಗೈರು ಹಾಜರಾಗಿದ್ದು ನಿಜ. ಆದರೆ ಈ ವಿಚಾರವನ್ನು ನಾನು ಮೊದಲೇ ಹೇಳಿ ಹೋಗಿದ್ದೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾವು ಕೋವಿಡ್-19 ನಿಯಂತ್ರಣಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದೇವೆ. ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ ಎಂದುರು.