Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ, ಜಿಲ್ಲಾಡಳಿತಗಳಿಗೆ ಸವಾಲಿನ ಜೊತೆ ಅವಕಾಶ: ಸುರೇಶ್ ಕುಮಾರ್

03:02 PM Jun 04, 2020 | sudhir |

ಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ಹಾಗೂ ಉಚ್ಛ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಯತ್ತಿರುವ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸುಗಮ ನಿರ್ವಹಣೆಯನ್ನು ಜಿಲ್ಲಾಡಳಿತಗಳು ಸವಾಲು ಮತ್ತು ಅವಕಾಶಗಳೆಂದು ಭಾವಿಸಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಪ್ರ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

Advertisement

ಜೂ. 25ರಿಂದ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ಸುಗಮ ನಿರ್ವಹಣೆ ಹಿನ್ನೆಲೆಯಲ್ಲಿ ಗುರುವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಕಾನ್ಫೆರೆನ್ಸ್‍ನಲ್ಲಿ ಮಾತನಾಡಿದ ಅವರು, ತಂತಮ್ಮ ಜಿಲ್ಲೆಯ ಕೋವಿಡ್ ವಾರಿಯರ್ಸ್‍ಗಳ ನೇತೃತ್ವ ವಹಿಸಿ ಕೋವಿಡ್ ಎದುರಿಸಿದಂತೆ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಕೈಗೊಳ್ಳುವಲ್ಲಿ ತಮ್ಮೆಲ್ಲರ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.

ಈ ಬಾರಿಯ ಪರೀಕ್ಷೆ ಉಚ್ಛ ನ್ಯಾಯಾಲಯದ ಸ್ಪಷ್ಟ ಆದೇಶದಂತೆ ಶಿಕ್ಷಣ, ಆರೋಗ್ಯ, ಗೃಹ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳ ಸಮನ್ವಯದಲ್ಲಿ ನಡೆಯುತ್ತಿರುವುದರಿಂದ ಯಾವುದೇ ಒಬ್ಬ ವಿದ್ಯಾರ್ಥಿಯೂ ಯಾವುದೇ ಕಾರಣದಿಂದಲೂ ಪರೀಕ್ಷೆಯಿಂದ ವಂಚಿತವಾಗದಂತೆ ಹಾಗೂ ಪ್ರತಿ ವಿದ್ಯಾರ್ಥಿಯೂ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ಮಾಡುವಲ್ಲಿ ಜಿಲ್ಲಾಡಳಿತದ ಹೊಣೆಗಾರಿಕೆ ಈ ಬಾರಿ ಎಂದಿಗಿಂತ ಹೆಚ್ಚಾಗಿದ್ದು, ಅದಕ್ಕಾಗಿ ಸಮರೋಪಾದಿಯಲ್ಲಿ ಈಗಿನಿಂದಲೇ ಎಲ್ಲ ಪರೀಕ್ಷಾ ಪೂರ್ವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ವಿಡಿಯೋ ಕಾನ್ಫೆರೆನ್ಸ್‍ನಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾಶಿಇ ಆಯುಕ್ತ ಡಾ. ಕೆ.ಜಿ.ಜಗದೀಶ್, ಎಸ್‍ಎಸ್‍ಎ ಎಸ್‍ಪಿಡಿ ಡಾ. ಎಂ.ಟಿ. ರೇಜು ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next