Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸರ್ಕಾರದ ಸುರಕ್ಷತಾ ಮಾರ್ಗಸೂಚಿಗಳಿಗೆ ಹೈಕೋರ್ಟ್‌ ಅಸ್ತು

07:58 AM May 28, 2020 | Lakshmi GovindaRaj |

ಬೆಂಗಳೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಸುರಕ್ಷತಾ  ಮಾರ್ಗಸೂಚಿಗಳಿಗೆ (ಎಸ್‌ಓಪಿ) ಅಸ್ತುಎಂದಿರುವ ಹೈಕೋರ್ಟ್‌ ಅವುಗಳನ್ನು  ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.

Advertisement

ಬರುವ ಜೂನ್‌ 25ರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೈಗೊಂಡಿರುವ ನಿರ್ಧಾರ  ರದ್ದುಪಡಿಸುವಂತೆ ಕೋರಿ  ವಕೀಲರಾದ ಎಂ. ಲೋಕೇಶ್‌ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ. ಪಿ. ಕೃಷ್ಣ ಭಟ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಈ  ವೇಳೆ ಸರ್ಕಾರದ ಪರ ವಕೀಲರು, ಎಸ್‌ಎಸ್‌ ಎಲ್‌ಸಿ ಪರೀಕ್ಷೆಗಳನ್ನು ನಡೆಸುವ ಸಂಬಂಧ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಸುರಕ್ಷತಾ ಮಾರ್ಗಸೂಚಿಗಳನ್ನು (ಎಸ್‌ಓಪಿ) ನ್ಯಾಯ ಪೀಠಕ್ಕೆ ಸಲ್ಲಿಸಿದರು.  ಪರೀಕ್ಷೆ ನಡೆಸುವ  ವೇಳೆ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಕೊರೋನಾ ವೈರಸ್‌ ಸೋಂಕು ಹರಡುವುದನ್ನು ನಿಯಂತ್ರಿಸಲು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್-ಸ್ಯಾನಿಟೈಸರ್‌, ಆರೋಗ್ಯ ತಪಾಸಣೆ ಕಡ್ಡಾಯ  ಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.

ಇದನ್ನು  ದಾಖಲಿಸಿಕೊಂಡ ನ್ಯಾಯಪೀಠ, ಪರೀಕ್ಷೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಪಾಲನೆ, ಸ್ವತ್ಛತೆ ಕಾಯ್ದುಕೊಳ್ಳುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳ ಜೊತೆಗೆ ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು  ಎಂದು ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿತು. ಇದರೊಂದಿಗೆ ಪರೀಕ್ಷೆ ನಡೆಸಲು ಸರ್ಕಾರಕ್ಕೆ ಹಾದಿ ಸುಗಮವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next