ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 3.30ಕ್ಕೆ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಾರಿಯ ಪರೀಕ್ಷಾ ಫಲಿತಾಂಶ ವಿದ್ಯಾರ್ಥಿಗಳ ಅಥವಾ ಪೋಷಕರ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಬರಲಿದೆ. ಅದಲ್ಲದೆ ವೆಬ್ ಸೈಟ್ ನಲ್ಲೂ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ.
ಕೋವಿಡ್-19 ಸೋಂಕು ಭೀತಿಯ ನಡುವೆ ಸೂಕ್ತ ಮುಂಜಾಗೃತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸರ್ಕಾರ ಯಶಸ್ವಿಯಾಗಿತ್ತು. ಶೇ.98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸಚಿವರ ಕಿವಿಮಾತು: ಫಲಿತಾಂಶ ಹಿನ್ನಲೆಯಲ್ಲಿ ಸಚಿವ ಸುರೇಶ್ ಕುಮಾರ್ ಪೋಷಕರಿಗೆ ಕೆಲವು ಕಿವಿಮಾತು ಹೇಳಿದ್ದಾರೆ.
ತಮ್ಮ ಮೊಬೈಲಿಗೆ ಫಲಿತಾಂಶ ಬರುವುದರಿಂದ, ಕೋವಿಡ್ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ.
ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ.
ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಸಚಿವರು ಕಿವಿಮಾತು ಹೇಳಿದ್ದಾರೆ.