Advertisement

134 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

11:10 AM Mar 20, 2018 | Team Udayavani |

ಕಲಬುರಗಿ: ಪ್ರಸಕ್ತ ಸಾಲಿನ ಎಸ್‌ಎಸ್‌ ಎಲ್‌ಸಿ ಪರೀಕ್ಷೆ ಮಾ.23ರಿಂದ ಏಪ್ರಿಲ್‌ 6ರ ವರೆಗೆ ನಡೆಸಲು ಸರಕಾರ ಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ 134 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಕರ್ಯಗಳೊಂದಿಗೆ ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿದರು ಮಾತನಾಡಿದರು.

ಜಿಲ್ಲೆಯಲ್ಲಿ ಖಾಸಗಿ ವಿದ್ಯಾರ್ಥಿಗಳು ಒಳಗೊಂಡಂತೆ 24,729 ಗಂಡು ಮಕ್ಕಳು ಮತ್ತು 18,569 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 43,298 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ವಿತರಣೆ ಸಮರ್ಪವಾಗಿ ನಡೆಯಬೇಕು. ಅಲ್ಲದೆ, ಪ್ರಶ್ನೆ ಪತ್ರಿಕೆ ಬಯಲು ಸೇರಿದಂತೆ ಇತರೆ ಯಾವುದೇ ಅಹಿತಕರ ಚಟುವಟಿಕೆ ನಡೆಯದಂತೆ ತುಂಬಾ ಎಚ್ಚರಿಕೆಯಿಂದ ನಿಭಾಯಿಸಿಬೇಕು ಎಂದು ಪರೀಕ್ಷೆಗೆ ನಿಯೋಜನೆಗೊಂಡ ಎಲ್ಲ ಆಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು. 

ಪ್ರಥಮ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗಳು ಬೆಳಗ್ಗೆ 9:30ರಿಂದ ಮಧ್ಯಾಹ್ನ 12:30ರ ವರೆಗೆ ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆ ವಿಷಯದ ಪರೀಕ್ಷೆಗಳು ಬೆಳಗ್ಗೆ 9:30ರಿಂದ ಮಧ್ಯಾಹ್ನ 12:00ರ ವರೆಗೆ ನಡೆಯಲಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಅನುವಾಗುವಂತೆ 134 ಸಿಟ್ಟಿಂಗ್‌ ಸ್ಕ್ವಾಡ್ಸ್‌, 66 ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರು, 28 ಸಂಚಾರಿ ಜಾಗೃತ ದಳ, 43 ಮಾರ್ಗ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ ಎಂದು ಹೇಳಿದರು.

134 ಪರೀಕ್ಷಾ ಕೇಂದ್ರಗಳ ಪೈಕಿ 16 ಸೂಕ್ಷ್ಮ 11 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರ ಎಂದು ಗುರುತಿಸಲಾಗಿದೆ. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರ ಕೊಠಡಿಯಲ್ಲಿ ಹಾಗೂ ಆಯ್ದ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ವಿಶೇಷವಾಗಿ ಪತ್ರಿಕೆ ತೆರೆಯುವಾಗ ಹಾಗೂ ಪರೀಕ್ಷೆ ನಂತರ ಪ್ಯಾಂಕಿಂಗ್‌ ಮಾಡುವ ಕಾರ್ಯವನ್ನು ಸಿಸಿ ಕ್ಯಾಮೆರಾದಲ್ಲಿ ದಾಖಲಿಸುವಂತಾಗಲು ಸಿಸಿಟಿವಿ ಪರೀಕ್ಷಾ ಸಮಯದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

Advertisement

ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯ ಪ್ರದೇಶದಲ್ಲಿ ಝೆರಾಕ್ಸ್‌, ಪುಸ್ತಕ ಅಂಗಡಿ ಮುಚ್ಚುವಂತೆ ಹಾಗೂ ಸಿಆರ್‌ಪಿಸಿ 144 ಕಲಂ ಅನ್ವಯ ನಿಷೇಧಿ ತ ಪ್ರವೇಶ ಎಂದು ಆದೇಶ ಹೊರಡಿಸಲಾಗುವುದು.
 
ಪರೀಕ್ಷಾ ಕೇಂದ್ರಗಳಲ್ಲಿ ಸಾಮೂಹಿಕ ನಕಲು ತಡೆಯಲು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ತಪಾಸಿಸಲು ಪ್ರತ್ಯೇಕವಾಗಿ ಸಿಬ್ಬಂದಿ ನಿಯೋಜಿಸಬೇಕು. ಅಗತ್ಯ ಬಂದೋಬಸ್ತ್ಗಾಗಿ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಮೊಬೈಲ್‌ ಮತ್ತು ಇತರೆ ಎಲೆಕ್ಟ್ರಾನಿಕ್‌ ಉಪಕರಣ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಇನ್ನಿತರ ವ್ಯಕ್ತಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಿಸದಂತೆ ಮುಖ್ಯ ಅಧಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಪರೀಕ್ಷಾ ದಿನದಂದು ಆ ಪತ್ರಿಕೆ ವಿಷಯ ಶಿಕ್ಷಕರು ಪರೀಕ್ಷಾ ಕೇಂದ್ರದ ಕ್ಯಾಂಪಸ್‌ದಲ್ಲಿರದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ನಕಲಿಗೆ ಪ್ರೋತ್ಸಾಹಿಸುವವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಮಾತನಾಡಿ, ಪರೀಕ್ಷೆಗೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು. ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಅಧೀಕ್ಷಕರು, ವೀಕ್ಷಕರು, ಕಸ್ಟೋಡಿಯನ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅತ್ಯಂತ ಮಹತ್ವದ್ದಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ಮತ್ತು ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಹಾಗೂ ಅಕ್ರಮ ಚಟುವಟಿಕೆಗಳು ನಡೆಯಬಾರದು. ಒಂದು ವೇಳೆ ನಡೆದರೆ ಅದಕ್ಕೆ ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಆದ್ದರಿಂದ ತುಂಬಾ ಎಚ್ಚರಿಕೆಯಿಂದ ಪರೀಕ್ಷೆ ನಡೆಸಿ, ಅಗತ್ಯಕ್ಕಾಗಿ ಪೊಲೀಸರ ನೆರವು ಇದ್ದೇ ಇರುತ್ತದೆ.
ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿಗಳು, ಕಲಬುರಗಿ

Advertisement

Udayavani is now on Telegram. Click here to join our channel and stay updated with the latest news.

Next