ಬೆಳಗಾವಿ: ಕೋವಿಡ್ ಆತಂಕದಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಕೋವಿಡ್ ಭಯದಲ್ಲಿಯೇ ವಿದ್ಯಾರ್ಥಿಗಳು ಜೂ. 25ರಿಂದ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಲಿದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗಾಗಿ ಇಲಾಖೆ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವ ಮುನ್ನ ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸ್ಯಾನಿಟೆ„ಸರ್‌ನಿಂದ ಕೈ ತೊಳೆದುಕೊಳ್ಳಬೇಕು. ಪರೀಕ್ಷೆಗೆ ಬರುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಈಗಾಗಲೇ ವಿದ್ಯಾರ್ಥಿಗಳಿಗೆ ಮುನ್ಸೂಚನೆ ನೀಡಲಾಗಿದೆ. ಎದೆಗುಂದದೇ ವಿದ್ಯಾರ್ಥಿಗಳು ನಿರ್ಭಯದಿಂದ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬಹುದು ಎಂದು ಶಿಕ್ಷಣ ಇಲಾಖೆ ಅಭಯ ನೀಡಿದೆ.
ಕೋವಿಡ್ ವೈರಸ್ ಭಯ ಇದ್ದರೂ ವಿದ್ಯಾರ್ಥಿಗಳಿಗೆ ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಳ್ಳಲು ಬಹಳಷ್ಟು ಅವಕಾಶ ಸಿಕ್ಕಿದೆ. ಅನೇಕ ಗೊಂದಲಗಳ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿ ಆಗಿದ್ದರಿಂದ ಪರೀಕ್ಷೆ ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿ ಶೆ„ಕ್ಷಣಿಕ ಜಿಲ್ಲೆಯಲ್ಲಿ 104 ಕೇಂದ್ರಗಳು ಹಾಗೂ 20 ಉಪಕೇಂದ್ರಗಳಲ್ಲಿ 33,180 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇಲ್ಲಿ ವ್ಯಾಸಂಗ ಮಾಡುತ್ತಿದ್ದ 770 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು ಸಜ್ಜಾಗಿದ್ದರೆ, ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೇರೆಡೆಯಿಂದ ಬೆಳಗಾವಿಗೆ ಬಂದ 381 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೊಠಡಿಯ ಗೊಂದಲ ಬಗೆಹರಿಸಲು ವಿದ್ಯಾರ್ಥಿಗಳಿಗೆ ವಾಟ್ಸ್ ಆ್ಯಪ್ ಮೂಲಕ ಮಾಹಿತಿ ನೀಡಲಾಗಿದೆ. ಪ್ರತಿ ವಿದ್ಯಾರ್ಥಿಗೆ ಮಾಸ್ಕ್, ಸ್ಯಾನಿಟೆ„ಸರ್ ವಿತರಿಸಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಸ್ಯಾನಿಟೈಸರ್(ಸೋಂಕು ನಿವಾರಕ ಔಷಧ) ಸಿಂಪಡಿಸಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಸಿಬ್ಬಂದಿಯನ್ನೂ ಕೇಂದ್ರಕ್ಕೆ ನಿಯೋಜಿಸಲಾಗಿದೆ. ಪರೀಕ್ಷೆ ಬರೆಯುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಲಾಗುವುದು. ಥರ್ಮಲ್ ಸ್ಕ್ರೀನಿಂಗ್ ಬಳಿಕವೇ ಪರೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳಿಗೆ ಪ್ರವೇಶ ಇದೆ. ಪರೀಕ್ಷೆ ಬರೆಯುವಾಗ ಆಗಾಗ ಸ್ಯಾನಿಟೆ„ಸರ್‌ದಿಂದ ಕೈ ತೊಳೆಯಬೇಕು ಎಂದು ತಿಳಿಸಿದೆ.
ನಿಷೇಧಾಜ್ಞೆ ಜಾರಿ : ಸುಗಮ ಪರೀಕ್ಷೆಗೆ ವ್ಯವಸ್ಥೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂ. 25ರಿಂದ ಜುಲೆ„ 4ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, 144ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಕಲು ಮಾಡುವ ಸಂಭವಗಳಿರುತ್ತವೆ. ಪರೀಕ್ಷೆ ಸಮಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಹಾಗೂ ಅವ್ಯವಹಾರಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಲುವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಿಆರ್‌ಪಿಸಿ 1973 ಕಲಂ 144ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಎಲ್ಲ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡದಂತೆ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ನಿರ್ಭಯದಿಂದ, ಆತ್ಮವಿಶ್ವಾಸದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರಬೇಕು. –
ಎ.ಬಿ. ಪುಂಡಲೀಕ, ಡಿಡಿಪಿಐ ಬೆಳಗಾವಿ ಶೈಕ್ಷಣಿಕ ಜಿಲ್ಲೆ
-ಭೈರೋಬಾ ಕಾಂಬಳೆ