Advertisement

ಎಸೆಸೆಲ್ಸಿ: ಅಧಿಕಾರಿಗಳಿಗೆ ಮಾರ್ಗಸೂಚಿ

11:31 PM Jun 24, 2021 | Team Udayavani |

ಬೆಂಗಳೂರು: ಜುಲೈಯಲ್ಲಿ ನಡೆಯಲಿರುವ  ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತಂತೆ ಗುರುವಾರ ಸುತ್ತೋಲೆ ಹೊರಡಿಸಲಾಗಿದೆ.

Advertisement

ಖಾಸಗಿ ಪರೀಕ್ಷಾ ಕೇಂದ್ರಗಳಿಗೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಪರೀಕ್ಷಾ  ಮುಖ್ಯ ಅಧೀಕ್ಷಕರನ್ನಾಗಿ ನೇಮಿಸುವುದು ಕಡ್ಡಾಯ.  ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷಾರ್ಥಿಗಳಿಗೆ ಅನ್‌ಲಾಗ್‌/ಮೆಕ್ಯಾನಿಕ್‌ ಕೈಗಡಿಯಾರ ಬಳಸಲು ಅವಕಾಶವಿದೆ.  ಆದರೆ  ಡಿಜಿಟಲ್‌ ಹಾಗೂ ಸ್ಮಾರ್ಟ್‌ ವಾಚ್‌ ಬಳಸುವಂತಿಲ್ಲ.   ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಅಧಿಕಾರಿ ಮತ್ತು ಸಿಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲು ಸೂಚಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ನೆಲದ ಮೇಲೆ ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಗಿದೆ. ಒಂದು ಕೊಠಡಿಯಲ್ಲಿ ಕನಿಷ್ಠ 12 ವಿದ್ಯಾರ್ಥಿಗಳಂತೆ ಪ್ರತಿ ಕೇಂದ್ರಕ್ಕೆ ಕನಿಷ್ಠ 100 ವಿದ್ಯಾರ್ಥಿಗಳು ಕಡಿಮೆಯಿಲ್ಲದಂತೆ  ಕೇಂದ್ರ ರಚನೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರವನ್ನು 3 ದಿನಗಳ ಮೊದಲು ಸೋಡಿಯಂ ಹೈಪೋಕ್ಲೋರೆಟ್‌ ಸೆಲ್ಯೂಷನ್‌ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಮತ್ತು ಶಿಸ್ತನ್ನು ಕಾಪಾಡುವುದಕ್ಕಾಗಿ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಸುತ್ತೂಲೆಯಲ್ಲಿ ತಿಳಿಸಲಾಗಿದೆ.

ಎಸೆಸೆಲ್ಸಿ ಪರೀಕ್ಷೆ: ಸಿಬಂದಿಗೆ  ಲಸಿಕೆ ನೀಡಲು ಸೂಚನೆ :

ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಸಿಬಂದಿಗೆ ಆದ್ಯತೆ ಮೇರೆಗೆ ಕೋವಿಡ್‌ ಲಸಿಕೆ ಹಾಕಿಸಲು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Advertisement

ಜುಲೈ 3ನೇ ವಾರದಲ್ಲಿ ನಡೆಯಲಿರುವ  ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಇತರ ಸಿಬಂದಿಗೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು  ಸಚಿವರು ಗುರುವಾರ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಈ ಸಾಲಿನ ಪ್ರೌಢಶಿಕ್ಷಣ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದಾರೆ. ಪಟ್ಟಿಯಲ್ಲಿರುವ ಎಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next