ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮಾ.17 ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಏಪ್ರಿಲ್ 6 (ಮಾ.23ರಿಂದ ಏ.6)ಕ್ಕೆ ಮುಗಿಯಲಿದ್ದು, ಈ ಎರಡೂ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ಮೂರು ಅಥವಾ ನಾಲ್ಕನೇ ವಾರದಲ್ಲಿ ಹೊರಬೀಳುವ ಸಾಧ್ಯತೆಯಿದೆ.
ಮಾ.24ರಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 6.90 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ 20 ಸಾವಿರ ಉಪನ್ಯಾಸಕರ ನಿಯೋಜನೆ ಮಾಡಲಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರತ್ಯೇಕವಾಗಿ ನಡೆಯಲಿದೆ.
ಪಿಯು ಉತ್ತರ ಪತ್ರಿಕೆ ಮೌಲ್ಯಮಾಪನಕ್ಕಾಗಿಯೇ 52 ಕೇಂದ್ರಗಳನ್ನು ರಾಜ್ಯಾದ್ಯಂತ ತೆರೆಯಲಾಗುತ್ತದೆ. ಏ.18 ಮತ್ತು 19ರಂದು ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ನಡೆಯಲಿದೆ. ಸಿಇಟಿ ಮುಗಿದ ತಕ್ಷಣವೇ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲಾಗುತ್ತದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 9.6 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸುಮಾರು 60 ಸಾವಿರ ಶಿಕ್ಷಕರನ್ನು ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ನಿಯೋಜನೆ ಮಾಡಲಾಗುತ್ತದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಅಷ್ಟರೊಳಗೆ ಪೂರ್ಣಗೊಂಡಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಫಲಿತಾಂಶಗಳನ್ನು ಒಂದೇ ದಿನ ಘೋಷಿಸುವ ಸಾಧ್ಯತೆಯಿದೆ.
ಮೇನಲ್ಲಿ ಚುನಾವಣೆ ನಡೆಯುವುದರಿಂದ ಬಹುತೇಕ ಉಪನ್ಯಾಸಕರು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿರುತ್ತಾರೆ. ಹೀಗಾಗಿ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ಸೇರಿ ಎಲ್ಲ ಪ್ರಕ್ರಿಯೆಗಳು ಏಪ್ರಿಲ್ ಅಂತ್ಯದೊಳಗೆ ಪೂರ್ಣವಾಗಲಿದೆ ಎಂದು ಇಲಾಖೆಯ ಮೂಲಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿವೆ.
ಮೌಲ್ಯಮಾಪನ ಬಹಿಷ್ಕಾರ: ಈ ಮಧ್ಯೆ, ವೇತನ ತಾರತಮ್ಯ ನಿವಾರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲರ ಸಂಘವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆಯನ್ನೂ ಸಂಘ ನೀಡಿದೆ. ಪ್ರಾಂಶುಪಾಲರ ಸಂಘವು ಮೌಲ್ಯಮಾಪನ ಬಹಿಷ್ಕಾರ ಮಾಡಿದರೆ, ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರೂ ಮೌಲ್ಯಮಾಪನ ಬಹಿಷ್ಕಾರ ಮಾಡಲಿದ್ದಾರೆ.
ದ್ವಿತೀಯ ಪಿಯು ಮೌಲ್ಯಮಾಪನ ಮಾ.24ರಿಂದ ಆರಂಭವಾಗಲಿದೆ. ಸಿಇಟಿ ಮುಗಿದ ತಕ್ಷಣವೇ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲಿದ್ದೇವೆ.
-ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ