ಚಿತ್ತಾಪುರ: ತಾಲೂಕಿನಲ್ಲಿ ಮಾ.28ರಿಂದ ಏ.11ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಪಾರದರ್ಶಕ, ನಕಲು ಮುಕ್ತ ಹಾಗೂ ನ್ಯಾಯ ಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದರು.
ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಪರೀûಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯ ನಿರ್ವಹಿಸಬೇಕು. ತಾಲೂಕು ವ್ಯಾಪ್ತಿಯ 23 ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ಸಹಾಯ ಪಡೆದು ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಸಿಬ್ಬಂದಿ ಕೇಂದ್ರದಲ್ಲಿ ಒಂದು ಗಂಟೆ ಮುಂಚೆ ಹಾಜರಿದ್ದು, ಪ್ರತಿಯೊಂದು ವಿಷಯ ಪರಿಶೀಲಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ವ್ಯಕ್ತಿಗಳು ಮಾತ್ರ ಕೇಂದ್ರದಲ್ಲಿ ಹಾಜರಿದ್ದು, ಸಂಬಂಧವಿಲ್ಲದ ವ್ಯಕ್ತಿಗಳನ್ನು ಕೇಂದ್ರದಿಂದ ಹೊರಗೆ ಹೋಗುವಂತೆ ಸೂಚಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ ಮಾತನಾಡಿ, ತಾಲೂಕಿನಲ್ಲಿ ಒಟ್ಟು 23 ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳಿವೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಕೋಣೆಗಳಿಗೆ ಸ್ಯಾನಿಟೈಸರ್ ಮಾಡಿಸಲಾಗುತ್ತಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶವಿದ್ದು, ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು ಎಂದು ಹೇಳಿದರು.
ತಾಪಂ ಇಒ ನೀಲಗಂಗಾ ಬಬಲಾದ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಸೇಡಂ ಮಾತನಾಡಿದರು. ಪ್ರಕಾಶ ನಾಯಿಕೋಡಿ, ದೇವಿಂದ್ರರೆಡ್ಡಿ ದುಗನೂರ ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು. ಶಿಕ್ಷಣ ಸಂಯೋಜಕ ಸಂತೋಷಕುಮಾರ ಶಿರನಾಳ ನಿರೂಪಿಸಿ, ವಂದಿಸಿದರು.