ದಾವಣಗೆರೆ: ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಡಿ. 12 ರಂದು ದಾವಣಗೆರೆಯ ದೇವರಾಜ ಅರಸು ಬಡಾವಣೆಯಶ್ರೀ ಬೀರಲಿಂಗೇಶ್ವರ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುರುಬರ ಎಸ್‌ಟಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಬಿ.ಎಂ. ಸತೀಶ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11ಕ್ಕೆ ನಡೆಯುವಪೂರ್ವಭಾವಿ ಸಭೆಯಲ್ಲಿ ಕಾಗಿನೆಲೆಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ,ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವಬಿ.ಎ. ಬಸವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ. ನಾಗರಾಜ್, ಮಾಜಿ ಸಚಿವರಾದ ಎಚ್. ವಿಶ್ವನಾಥ್, ಎಚ್.ಎಂ. ರೇವಣ್ಣ, ಮಾಜಿಸಂಸದ ಕೆ. ವಿರೂಪಾಕ್ಷಪ್ಪ, ಕೆ. ಮುಕುಡಪ್ಪ,ಒಳಗೊಂಡಂತೆ ವಿವಿಧ ಮುಖಂಡರು, ಗಣ್ಯರು,ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳಪ್ರಮುಖ ಮುಖಂಡರು, ಪ್ರತಿನಿಧಿಗಳು ಭಾಗವಹಿಸುವರು ಎಂದರು.
ರಾಜ್ಯದಲ್ಲಿ 60 ರಿಂದ 70 ಲಕ್ಷ ಜನಸಂಖ್ಯೆ ಹೊಂದಿರುವ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ,ರಾಜಕೀಯವಾಗಿ ತೀರಾ ಹಿಂದುಳಿದಿರುವ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂಬುದು ಅನೇಕ ವರ್ಷದ ಹೋರಾಟ. ರಾಯಚೂರು, ಕಲಬುರುಗಿ ಜಿಲ್ಲೆಯಲ್ಲಿ ಕುರುಬ ಸಮಾಜಕ್ಕೆ ಸಮಾನಾರ್ಥಕ ಪದಗಳಾದ ಗೊಂಡ, ರಾಜಗೊಂಡ ಪದಗಳನ್ನುಎಸ್‌ಟಿ ಮೀಸಲಾತಿ ಪಟ್ಟಿಗೆ ಸೇರಿಸಲಾಗಿದೆ. ಕೊಡಗಿನಲ್ಲಿ ಎಸ್‌ಟಿ ಪಟ್ಟಿಗೆ ಸೇರಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದ್ಯಾಂತ ಎಸ್‌ಟಿ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬುದು ನಮ್ಮ ಒತ್ತಾಯ ಎಂದು ಹೇಳಿದರು.
ರಾಮಕೃಷ್ಣ ಹೆಗಡೆ ಸರ್ಕಾರದ ಅವಧಿಯಲ್ಲಿ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆಸೇರಿದವರೆಂದು ಪರಿಗಣಿಸಿ ಶೈಕ್ಷಣಿಕ ಮೀಸಲಾತಿ ನೀಡಲಾಗಿತ್ತು. ಆದರೆ ಯಾವುದೇ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ, ತೆಗೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೈ ಬಿಡಲಾಯಿತು. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸು ಮಾಡಬಹುದಿತ್ತು. ಆದರೆ ಆಗಿನ ಮುಖಂಡರು ಪ್ರಯತ್ನ ಮಾಡದ ಕಾರಣಕ್ಕೆ ಈವರೆಗೆ ಮೀಸಲಾತಿ ದೊರೆತಿಲ್ಲ ಎಂದು ತಿಳಿಸಿದರು.
1988ರಲ್ಲಿ ಚಿನ್ನಪ್ಪ ರೆಡ್ಡಿ ಆಯೋಗದವರದಿ ಪ್ರಕಾರ ಎಸ್ಸೆಸ್ಸೆಲ್ಸಿಯಲ್ಲಿ 10 ಸಾವಿರ ಜನಸಂಖ್ಯೆಗೆ 39 ಜನರು ಪಾಸಾಗಿದ್ದರೆ ಅಂತಹ ಸಮುದಾಯಗಳನ್ನು ಮುಂದುವರೆದ ಸಮುದಾಯ ಎಂದು ಪರಿಗಣಿಸಲಾಗಿತ್ತು.ಆದರೆ ನಮ್ಮ ಸಮುದಾಯದವರಲ್ಲಿ ಪಾಸಾದ ಪ್ರಮಾಣ ಅರ್ಧಕ್ಕಿಂತಲೂ ಕಡಿಮೆ ಇತ್ತು. ಹಾಗಲೂ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಲಾಯಿತು ಎಂದು ದೂರಿದರು.
ಈಗ ಕಾಗಿನೆಲೆ, ಹೊಸದುರ್ಗದ ಶ್ರೀಗಳ ನೇತೃತ್ವದಲ್ಲಿ ಹೋರಾಟ ಪ್ರಾರಂಭವಾಗಿದೆ. ಜ. 15 ರಿಂದ ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆನಡೆಯಲಿದೆ. ಫೆ. 7 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 10ಲಕ್ಷಕ್ಕೂ ಹೆಚ್ಚಿನ ಜನರ ರಾಜ್ಯ ಮಟ್ಟದ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಮಾತನಾಡಿ, ಡಿ. 12 ರಂದು ನಡೆಯುವ ಪೂರ್ವಭಾವಿ ಸಭೆಗೆ ಎಲ್ಲಾ ಭಾಗದ ಸಮಾಜದ ಪ್ರತಿನಿಧಿಗಳು ಭಾಗವಹಿಸಬೇಕು. ಈ ಮೂಲಕಸಮಾಜದ ಹೋರಾಟವನ್ನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಎಸ್‌ಟಿ ಹೋರಾಟ ಸಮಿತಿಯ ಅಡಾಣಿ ಸಿದ್ದಪ್ಪ, ಹಾಲೇಕಲ್ಲು ಸಿ. ವೀರಣ್ಣ, ಬಿ.ಜೆ. ರಮೇಶ್, ಶಿವಣ್ಣ ಮೇಸ್ಟ್ರು ಇತರರು ಸುದ್ದಿಗೋಷ್ಠಿಯಲ್ಲಿದ್ದರು.