Advertisement

ಕೈಗಾರಿಕೆಗಳ ಆರಂಭಕ್ಕೆ ಅಗತ್ಯ ನೆರವು

02:31 PM May 03, 2020 | Suhan S |

ಬೆಳಗಾವಿ: ಬರುವ ಮೇ 4 ರಿಂದ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಕಡೆ ಎಲ್ಲ ರೀತಿಯ ಕೈಗಾರಿಕೆಗಳ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೈಗಾರಿಕೆ ಆರಂಭಿಸಲು ಅನುಮತಿ ಅಗತ್ಯವಿಲ್ಲ. ಆದರೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸ್ವಯಂ ಘೋಷಣಾಪತ್ರ ಸಲ್ಲಿಸಿ ಕೈಗಾರಿಕೆ ಆರಂಭಿಸಬಹುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

Advertisement

ಇಲ್ಲಿನ ಉದ್ಯಮ ಭಾಗದ ಬೆಳಗಾವಿ ಫೌಂಡ್ರಿ ಕ್ಲಸ್ಟರ್‌ ಸಭಾಂಗಣದಲ್ಲಿ ಶನಿವಾರ ಕೈಗಾರಿಕೋದ್ಯಮಿಗಳ ಸಭೆ ನಡೆಸಿದ ಅವರು, ಕಾರ್ಮಿಕರಿಗೆ ಪಾಸ್‌ ಅಗತ್ಯವಿಲ್ಲ. ಕೈಗಾರಿಕೆಗಳ ಆರಂಭಕ್ಕೆ ಎಲ್ಲ ರೀತಿಯ ಅಗತ್ಯ ನೆರವು ನೀಡಲು ಸರ್ಕಾರ ಸಿದ್ಧ ವಿದೆ ಎಂದು ಭರವಸೆ ನೀಡಿದರು. ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ವಿಶೇಷ ಪ್ಯಾಕೇಜ್‌ ಘೋಷಣೆಗೆ ಈಗಾಗಲೇ ಪ್ರಸ್ತಾವ ಸಹ ಸಲ್ಲಿಸಲಾಗಿದ್ದು ಆದಷ್ಟು ಬೇಗ ಪ್ರಧಾನಮಂತ್ರಿಗಳು ಇದರ ಬಗ್ಗೆ ಘೋಷಣೆ ಮಾಡಬಹುದು ಎಂದರು.

ಕೈಗಾರಿಕೆಗಳನ್ನು ಆರಂಭಿಸುವ ಸಂದರ್ಭದಲ್ಲಿ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದ ಅವರು, ಕೋವಿಡ್‌-19 ಅನ್ನು ಸವಾಲಾಗಿ ಸ್ವೀಕರಿಸಿ ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕಿದೆ ಎಂದರು.

ಲಾಕ್‌ ಡೌನ್‌ ಯಶಸ್ಸಿಗೆ ಕೈಗಾರಿಕೋದ್ಯಮಿಗಳು, ವ್ಯಾಪಾರಸ್ಥರು, ಸಾಮಾನ್ಯ ಜನ ಸೇರಿದಂತೆ ಎಲ್ಲರೂ ಸಹಕಾರ ನೀಡಿದ್ದಾರೆ. ಲಾಕ್‌ ಡೌನ್‌ ಮುಂದುವರಿಸಿದ್ದರೂ ಹಂತ ಹಂತವಾಗಿ ವಿವಿಧ ಬಗೆಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಝೋನ್‌ ಗಳ ಆಧಾರದ ಮೇಲೆ ಕೈಗಾರಿಕೆ ಮತ್ತಿತರ ಚಟುವಟಿಕೆಗಳಿಗೂ ಅನುಮತಿ ನೀಡಲಾಗಿದೆ ಎಂದ ಅವರು, ವಿದ್ಯುತ್‌ ಬಿಲ್‌ ಭರಿಸಲು ಕಾಲಾವಕಾಶ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಸೇರಿದಂತೆ ಕೆಲವು ಕಾರ್ಖಾನೆಗಳು 24 ಗಂಟೆ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ನಿರಂತರ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

Advertisement

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕಾರ್ಮಿಕರಿಗೆ ಪಾಸ್‌ಗಳ ಅಗತ್ಯವಿಲ್ಲದಿರುವುದರಿಂದ ದ್ವಿಚಕ್ರ ವಾಹನಗಳಲ್ಲಿ ಒಬ್ಬರೆ ಬರಬಹುದು. ಕಂಟೆ„ನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಕಡೆಗಳಿಂದ ಕಾರ್ಮಿಕರು ಮುಕ್ತವಾಗಿ ಸಂಚರಿಸಬಹುದು ಎಂದರು.

ಚೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಶ್ರೀಧರ ಉಪ್ಪಿನ ಮಾತನಾಡಿ, ಕೈಗಾರಿಕಾ ಕಾರ್ಮಿಕರಿಗೆ ಅಗತ್ಯವಿರುವ ಪಾಸ್‌ ಗಳನ್ನು ವಿತರಿಸಬೇಕು ಹಾಗೂ ಮುಂದಿನ ನಾಲ್ಕು ತಿಂಗಳ ಕಾಲ ಕೆಲಸದ ಅವಧಿಯನ್ನು ನಾಲ್ಕು ಗಂಟೆಗಳ ಕಾಲ ವಿಸ್ತರಿಸಬೇಕು.ಉದ್ಯಮಿಗಳಿಗೆ ಶೇ.3 ಕ್ಕಿಂತ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಸಾಲಸೌಲಭ್ಯ ನೀಡಬೇಕು ಎಂದು ಮನವಿ ಮಾಡಿದರು. ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್‌ ಜುವಳಿ ಮಾತನಾಡಿ, ಕೈಗಾರಿಕೆಗಳ ಜೊತೆಗೆ ಕಚ್ಚಾಸಾಮಗ್ರಿ ಪೂರೈಕೆ ಘಟಕಗಳನ್ನು ಆರಂಭಿಸಿದರೆ ಮಾತ್ರ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಹೇಳಿದರು.

ಕೈಗಾರಿಕೆಗಳು ಸರಾಗವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಜಿಲ್ಲಾಮಟ್ಟದಲ್ಲಿ ಒಬ್ಬ ನೋಡಲ್‌ ಅಧಿಕಾರಿಗಳನ್ನು ನೇಮಿಸಬೇಕು. ಸಿಮೆಂಟ್‌ ಮತ್ತಿತರ ವಸ್ತುಗಳ ಬೆಲೆ ದಿಢೀರ್‌ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಉದ್ಯಮಿಗಳು ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್‌, ಕೃಷಿ ಮತ್ತಿತರ ಅವಶ್ಯಕ ಕೈಗಾರಿಕೆಗಳಿಗೆ ಈಗಾಗಲೇ ಮಾರ್ಗಸೂಚಿ ಅನ್ವಯ ಕಾರ್ಯ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಶಾಸಕರಾದ ಅಭಯ ಪಾಟೀಲ, ಪಿ.ರಾಜೀವ, ಅನಿಲ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಕೋವಿಡ್‌-19 ಉಸ್ತುವಾರಿ ಅಧಿಕಾರಿ ರಾಜೇಂದ್ರ ಚೋಳನ್‌, ಜಿಲ್ಲಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ, ಪೊಲೀಸ್‌ ಆಯುಕ್ತ ಬಿ.ಎಸ್‌. ಲೋಕೇಶ್‌ ಕುಮಾರ್‌, ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ¾ಣ ನಿಂಬರಗಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next