ಮೈಸೂರು: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 35,004 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು. ಇಂದಿನಿಂದ ಮಾ.23ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು, ನಕಲು ಸೇರಿದಂತೆ ಪರೀಕ್ಷಾ ಅಕ್ರಮ ಚಟುವಟಿಕೆ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ದಿನದಂದು ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ಹಾಗೂ ಉತ್ತರ ಪತ್ರಿಕೆಯನ್ನು ವಾಪಾಸ್ ತರುವ ವಾಹನಕ್ಕೆ ಜಿಪಿಎಸ್ ಅಳವಡಿಕೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಾ ನಿಷೇಧಾಜ್ಞೆ: ಮೈಸೂರು ಜಿಲ್ಲೆಯಾದ್ಯಂತ 50 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತ್ರ ಪ್ರದೇಶದಲ್ಲಿ 24 ಪರೀಕ್ಷಾ ಕೇಂದ್ರಗಳು, ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀ. ವ್ಯಾಪ್ತಿಯಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತ ಅನುಮಾನಾಸ್ಪದವಾಗಿ ತಿರುಗಾಡುವುದು, ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಕಂಪ್ಯೂಟರ್ ಸೆಂಟರ್, ಕೋಚಿಂಗ್ ಸೆಂಟರ್‌ಗಳನ್ನು ಬಂದ್ ಮಾಡಿಸಲು ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ 3 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
35,004 ವಿದ್ಯಾರ್ಥಿಗಳು ಪರೀಕ್ಷೆ: ಜಿಲ್ಲೆಯಲ್ಲಿ ಒಟ್ಟು 35,004 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 17,738 ಮಂದಿ ವಿದ್ಯಾರ್ಥಿನಿಯರು ಹಾಗೂ 17,266 ಮಂದಿ ಬಾಲಕರಿದ್ದಾರೆ. 28,813 ಮಂದಿ ಹೊಸದಾಗಿ ಪರೀಕ್ಷೆ ಬರೆಯುವವರಿದ್ದು, 4,668 ಮಂದಿ ರಿಪಿಟರ್ ಇದ್ದಾರೆ. ಜೊತೆಗೆ 1,523 ಮಂದಿ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಒಟ್ಟಾರೆ ಈ ವರ್ಷ 35,004 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ 9,792, ವಾಣಿಜ್ಯ 13,552 ಹಾಗೂ ವಿಜ್ಞಾನದಲ್ಲಿ 11650 ವಿದ್ಯಾರ್ಥಿಗಳಿದ್ದಾರೆ.
ಜಿಲ್ಲಾದ್ಯಂತ 22 ಸರ್ಕಾರಿ, 7 ಅನುದಾನಿತ, 14 ಅನುದಾನ ರಹಿತ ಹಾಗೂ 7 ವಿಭಜಿತ ಪಿಯು ಕಾಲೇಜು ಪರೀಕ್ಷಾ ಕೇಂದ್ರಗಳಲ್ಲಿ ಮಾ.4ರಿಂದ ಮಾ.23ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಜಿಲ್ಲೆಯ 6 ತಾಲೂಕುಗಳಿಗೆ 10 ಮಾರ್ಗಗಳಿಂದ ಹಾಗೂ ನಗರ ವ್ಯಾಪ್ತಿಯ ಎಲ್ಲ ಪರೀಕ್ಷಾ ಕೇಂದ್ರಗಳಿಗೆ 6 ಮಾರ್ಗಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯಲ್ಲಿ ಜಿಲ್ಲಾ ಖಜಾನೆಯಲ್ಲಿ ಪಿಯು ಪ್ರಶ್ನೆಪತ್ರಿಕೆಯ ಬಂಡಲ್ ಇರಿಸಲಾಗಿದೆ. ಕಳೆದ ವರ್ಷ 28 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೈಸೂರು ಜಿಲ್ಲೆಯಲ್ಲಿ ಕಳೆದ ಬಾರಿ ಶೇ.58 ಫಲಿತಾಂಶ ಬಂದಿದ್ದು ಈ ಬಾರಿ ಶೇ.80 ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇಂದಿನಿಂದ ಮಾ.23 ರವರೆಗೆ ಮೈಸೂರು ನಗರದ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 26 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಮಾ.4ರಿಂದ ಮಾ.23ರವರೆಗೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.