ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯ 8-10 ಶಾಸಕರು, ವಿಧಾನ ಪರಿಷತ್ ಸದಸ್ಯರು ಪಕ್ಷ ತೊರೆಯುತ್ತಿರುವುದನ್ನು ನೋಡಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಿಶ್ವಾಸವಿಲ್ಲವೆಂಬುದು ಸಾಬೀತಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.
ಮಂಗಳವಾರ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಡಬಲ್ ಎಂಜಿನ್ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ. ಬೊಮ್ಮಾಯಿ ಸರ್ಕಾರ ವಿಫಲವಾಗಿದೆ. ಈ ಸರ್ಕಾರದಲ್ಲಿ ವಿಶ್ವಾಸವಿಲ್ಲವೆಂಬ ಕಾರಣಕ್ಕೆ ಅವರದೇ ಪಕ್ಷದ ಶಾಸಕರು ರಾಜೀನಾಮೆ ಕೊಡುತ್ತಿದ್ದಾರೆ ಎಂದರು.
ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಆ ಪಕ್ಷದ ವಿಧಾನ ಪರಿಷತ್ತಿನ ಸದಸ್ಯರೊಬ್ಬರು ಪ್ರಾಯಶ್ಚಿತ ಸತ್ಯಾಗ್ರಹ ನಡೆಸಿದ್ದಾರೆ, ಮತ್ತೊಂದೆಡೆ ಹಲವರು ಬಿಜೆಪಿ ತೊರೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಇವೆಲ್ಲಾ ಪಾಸಿಟಿವ್ ಅಂಶಗಳಾಗುತ್ತಿವೆ. ಜತೆಗೆ ಬಿಪಿಎಲ್ ಕುಟುಂಬ ಸದಸ್ಯರಿಗೆ 10 ಕೆ.ಜಿ. ಅಕ್ಕಿ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಗೌರವಧನ ಹಾಗೂ ಯುವ ನಿಧಿಯಂತಹ ಗ್ಯಾರೆಂಟಿ ಯೋಜನೆಗಳು ಜನರಲ್ಲಿ ವಿಶ್ವಾಸ ಮೂಡಿಸಿವೆ ಎಂದು ಸುರ್ಜೇವಾಲ ತಿಳಿಸಿದರು.
ನಮ್ಮಲ್ಲಿ ಒಗ್ಗಟ್ಟಿದೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅಭ್ಯರ್ಥಿಗಳನ್ನು ಅವಿರೋಧವಾಗಿ ಒಮ್ಮತದಿಂದ ಆಯ್ಕೆ ಮಾಡಿದ್ದೇವೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ 124 ಕ್ಷೇತ್ರಗಳಿಗೆ ಮೊಟ್ಟ ಮೊದಲಿಗೆ ನಾವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 150 ಮಿಷನ್‌ನೊಂದಿಗೆ ನಾವು ಕೆಲಸ ಮಾಡುತ್ತಿದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.