Advertisement

ಅನುಕಂಪ ಲಾಭವಾಗಿಸಿಕೊಳ್ಳಲು ರಾಜ್ಯ ಬಿಜೆಪಿ ಕಾರ್ಯತಂತ್ರ 

06:50 AM May 21, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ಅವಕಾಶ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತವಾಗುತ್ತಿರುವ ಅನುಕಂಪವನ್ನು ಲಾಭವನ್ನಾಗಿ ಪರಿವರ್ತಿಸಿಕೊಳ್ಳಲು ಬಿಜೆಪಿ ಮುಂದಾಗಿದೆ.

Advertisement

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದಂತೆ ಭಾನುವಾರ
ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್‌ ಹಾಗೂ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌ ಸಮಾಲೋಚನೆ ನಡೆಸಿದರು.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಅವಕಾಶವಾದಿತನ ಎಂಬುದನ್ನು ಮುಂದಿಟ್ಟು ವಾಗ್ಧಾಳಿ ನಡೆಸುವುದು.
ಸದ್ಯದಲ್ಲೇ ನಡೆಯುವ ಎರಡು ಕ್ಷೇತ್ರಗಳ ಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಹೋರಾಟ ಮಾಡುವುದು. ಆ ಮೂಲಕ ಬಿಜೆಪಿ ಶಕ್ತಿ ಹೆಚ್ಚಿಸಿಕೊಳ್ಳುವ ರೂಪುರೇಷೆ ರಚಿಸಲಾಗಿದೆ.

ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗದಂತೆ ತಡೆದಿರುವುದರಿಂದವೀರಶೈವ-ಲಿಂಗಾಯತ ಸಮುದಾಯ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮುಂದಿನ ಲೋಕಸಭೆ ಚುನಾವಣೆವರೆಗೂ ಆ ಕಾವು ಉಳಿಸಿಕೊಂಡು ಹೆಚ್ಚಿನ ಸೀಟು ಗೆಲ್ಲಬೇಕು ಎಂಬ ಬಗ್ಗೆಯೂ ಚರ್ಚೆಗಳು ನಡೆದವು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರ ರಚನೆಯಾದರೂ ಮಂತ್ರಿಮಂಡಲ ವಿಸ್ತರಣೆ ನಂತರ ಅಸಮಾಧಾನ,ಭಿನ್ನಮತ ಉಂಟಾಗಬಹುದು. ಆಗ, ಬಿಜೆಪಿ ಸಕ್ರಿಯವಾಗಬೇಕು. ಆದರೆ,ಮುಂದಿನ ದಿನಗಳಲ್ಲಿ ಪ್ರತಿ ಹೆಜ್ಜೆ ಜಾಗರೂಕತೆಯಿಂದ ಇಡಬೇಕು ಎಂದು ನಿರ್ಧರಿಸಲಾಯಿತು ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದುವರಿಸುವ ಮಾತುಕತೆಗಳು ಕೇಳಿಬರುತ್ತಿರುವ
ಹಿನ್ನೆಲೆಯಲ್ಲಿ ಅದು ಸಾಧ್ಯವಾಗದಂತೆ ತಡೆಯುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಬೇಕಿದೆ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next