ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಹೋಬಳಿ ಮಟ್ಟದಲ್ಲಿ ಮೂಲಭೂತ ಸೌಕರ್ಯವಿರುವ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ (ಮಾರ್ಚ್ 04) ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇದನ್ನೂ ಓದಿ:ಬೊಮ್ಮಾಯಿ ಬಜೆಟ್ 2022: ಅಲ್ಪಸಂಖ್ಯಾತ ಸಮುದಾಯಕ್ಕೆ ವಿವಿಧ ಯೋಜನೆ ಘೋಷಿಸಿದ ಸಿಎಂ
ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯ ಕ್ರಮ ರಚಿಸಲಾಗುವುದು ಎಂದು ಹೇಳಿದರು. ಅಲ್ಲದೇ ಮುಂದಿನ ವರ್ಷದಿಂದ ಎನ್ ಇಪಿ ರಾಜ್ಯಾದ್ಯಂತ ಜಾರಿಯಾಗಲಿದೆ ಎಂದು ತಿಳಿಸಿದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಈ ಅನುದಾನದಡಿ ಅಭಿವೃದ್ದಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ನೀಡಲಾಗುವುದು ಎಂದು ಸಿಎಂ ಬಜೆಟ್ ಮಂಡನೆಯಲ್ಲಿ ಘೋಷಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂಪಾಯಿ ಅನುದಾನ, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿದ ಆಯ್ದ ಪ್ರೌಢ ಶಾಲೆಗಳನ್ನು ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
2021-22ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆ ಭರ್ತಿ ಮಾಡಲು ಅನುಮೋದಿಸಿದ್ದು, ನೇಮಕಾತಿ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ. ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಆಗುವವರೆಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ತಿಳಿಸಿದೆ.