ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಪಕ್ಷಗಳ ನಡುವಿನ ಗೊಂದಲ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿದರು.
ಭಾನುವಾರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು.
ವಿಶೇಷವಾಗಿ ಮಂಡ್ಯ, ಹಾಸನ ಹಾಗೂ ಮೈಸೂರಿನಲ್ಲಿ ಮೈತ್ರಿ ಪಕ್ಷಗಳ ನಡುವೆಭಿನ್ನಾಭಿಪ್ರಾಯವನ್ನು ಆದಷ್ಟು ಬೇಗ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ ರಾಜ್ಯದಲ್ಲಿ ರಾಹುಲ್ ಗಾಂಧಿಕೈಗೊಳ್ಳುವ ಪ್ರಚಾರ ಸಮಾವೇಶಗಳ ಪೂರ್ವ ಸಿದ್ದತೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಮೈತ್ರಿಬಗ್ಗೆ ಅಸಮಾಧಾನ ಹೊಂದಿರುವ ನಾಯಕರು ರಾಹುಲ್ ಪಾಲ್ಗೊಳ್ಳುವ ಸಮಾವೇಶಗಳಲ್ಲಿ ಪಾಲ್ಗೊಳ್ಳುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಪ್ರಯತ್ನಿಸುವಂತೆ ವೇಣುಗೋಪಾಲ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಮಾತನಾಡಿದ ಅವರು, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಕೆಲವು ಕಡೆ ಸಣ್ಣ ಪುಟ್ಟ ಸಮಸ್ಯೆಗಳಿವೆ. ಎಲ್ಲ ಸಮಸ್ಯೆಗಳು ಬಗೆ ಹರಿಯುತ್ತವೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಯಾವುದೇ ದೂರು ನೀಡಿಲ್ಲ. ಕಾಂಗ್ರೆಸ್ ನಾಯಕರುಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ದೇವೇಗೌಡರು ರಾಜ್ಯ ಕಾಂಗ್ರೆಸ್ ನಾಯಕರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಅಸಮಾಧಾನ ಇದೆ ಎನ್ನುವುದು ಮಾಧ್ಯಮಗಳ ಸೃಷ್ಠಿ ಎಂದರು.
ರಾಹುಲ್ ಗಾಂಧಿಯವರ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿದ್ದೇವೆ. ಏ.12 ರಂದು ನಾನೇ ಮಂಡ್ಯಕ್ಕೆ ಹೋಗುತ್ತಿದ್ದೇನೆ. ಎಲ್ಲವೂ ಬಗೆಹರಿಯಲಿದೆ.
– ಸಿದ್ದರಾಮಯ್ಯ, ಮಾಜಿ ಸಿಎಂ