Advertisement

ಬಿ.ಎಂ.ಎಸ್ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ

03:01 PM Dec 20, 2021 | Team Udayavani |

ದಾಂಡೇಲಿ: ಬಿ.ಎಂ.ಎಸ್ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯು ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆಯಿತು.

Advertisement

ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿ.ಎಂ.ಎಸ್ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಸಿ.ಟಿ.ಪಾಟೀಲ ಅವರು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಾಗೂ ಅವರಿಗಾಗಿ ಇರುವಂತಹ ಸರಕಾರ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ ಬಿ.ಎಂ.ಎಸ್ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘವು ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಬದ್ದತೆಯಿಂದ ಕೆಲಸ ನಿರ್ವಹಿಸುವುದರ ಮೂಲಕ ನಿರ್ಮಾಣ ಕಾರ್ಮಿಕರ ಧ್ವನಿಯಾಗಿದೆ. ಸಂಘಟನೆಯ ಅಧೀವೇಶನವು ನಡೆಯಲಿದ್ದು, ಸಂಘವನ್ನು ಬಲಪಡಿಸುವುದರ ಜೊತೆಗೆ ಕಟ್ಟಡ ನಿರ್ಮಾಣ ಕಾರ್ಮಿಕರ ಜ್ವಲಂತ ಸಮಸ್ಯೆಗಳು ಮತ್ತು ಅದಕ್ಕೆ ಪರಿಹಾರೋಪಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಹೇಳಿ ಸಂಘಟನೆಯು ರಾಜ್ಯದಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿರುವುದನ್ನು ಶ್ಲಾಘಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ರಾಜ್ಯ ಅಧ್ಯಕ್ಷರಾದ ಚಿಂತಾಮಣಿಯವರು ವಹಿಸಿ ರಾಜ್ಯದಲ್ಲಿ ಬಿ.ಎಂ.ಎಸ್ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸರಕಾರದ ಜೊತೆ ನಿರಂತರವಾಗಿ ಸಂಪರ್ಕವನ್ನು ಸಾಧಿಸಿ ಸಮಸ್ಯೆಗಳಿಗೆ ಹಾಗೂ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ನಾಡಿಗೇರ, ಪ್ರಮುಖರಾದ ಪ್ರಶಾಂತ ಕದಲಗಿ, ಪೇಪರ್ ಮಿಲ್ ಮಜ್ದೂರು ಸಂಘದ ಮುಖಂಡರಾದ ಭರತ್ ಪಾಟೀಲ ಹಾಗೂ ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಸಂಘಟನೆಯ ಪ್ರಮುಖರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next