ಬೆಳಗಾವಿ: ಮರಾಠಿ ಭಾಷಿಕರ ಮೇಲೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕರ್ನಾಟಕ ಸರ್ಕಾರವನ್ನು ಅಯೋಗ್ಯ(ನಾಲಾಯಕ್) ಸರ್ಕಾರ ಎಂದು ನಿಂದಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಕರ್ನಾಟಕ ಸರ್ಕಾರವನ್ನು ನಿಂದಿಸಿದ ಎಂಇಎಸ್ ಕಾರ್ಯಕರ್ತರು, ಅಯೋಗ್ಯ ಸರ್ಕಾರ ಕರ್ನಾಟಕದಲ್ಲಿದೆ. ಮರಾಠಿ ಭಾಷಿಕರ ಮೇಲೆ ಅನ್ಯಾಯ ಎಸಗುತ್ತಿದೆ. ಸರ್ಕಾರ ನಮ್ಮನ್ನು ಹತ್ತಿಕ್ಕುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.
ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿದ ಎಂಇಎಸ್ ಕಾರ್ಯಕರ್ತರು, ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಧರ್ಮವೀರ ಸಂಭಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬರುತ್ತಿದ್ದ ಪ್ರತಿಭಟನಾಕಾರರನ್ನು ಮೆರವಣಿಗೆಗೆ ಅನುಮತಿ ಇಲ್ಲದ್ದಕ್ಕೆ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಮಾರ್ಗ ಮಧ್ಯೆ ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.
ರಸ್ತೆ ಮಧ್ಯದಲ್ಲಿಯೇ ಕುಳಿತು ಪ್ರತಿಭಟನೆ ಮುಂದುವರಿಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಹೊತ್ತು ಕುಳಿತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದರು. ನಂತರ ಕಾಲೇಜು ರಸ್ತೆ ಮೂಲಕ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ಕಾರ್ಯಕರ್ತರು, ಮಹಾನಗರ ಪಾಲಿಕೆ ಮೇಲೆ ಅಳವಡಿಸಿರುವ ಕನ್ನಡ ಧ್ವಜ ತೆರವುಗೊಳಿಸಿ ಭಗವಾ ಧ್ವಜ ಹಾರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲೆಗಳನ್ನು ನೀಡಬೇಕು. ನಗರದಲ್ಲಿ ಅಳವಡಿಸಿರುವ ಫಲಕಗಳ ಮೇಲೆ ಮರಾಠಿಗೂ ಆದ್ಯತೆ ನೀಡಬೇಕು. ಮರಾಠಿಗರನ್ನು ಭಾಷಿಕ ಅಲ್ಪಸಂಖ್ಯಾತರು ಎಂದು ಪರಿಗಣಿಸಿ ಸವಲತ್ತು ಒದಗಿಸಲು 15 ದಿನಗಳ ಗಡುವು ನೀಡಿದರು.