ಬೆಂಗಳೂರು: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರ ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜು ಹಾಗೂ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ನೇತೃತ್ವದ ನಿಯೋಗ ಭೇಟಿಯ ನಂತರ ಮಾತನಾಡಿದ ಅವರು, ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಪ್ರವಾಹ ಪೀಡಿತ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮಹದಾಯಿ ಸಮಸ್ಯೆ ಬಗೆಹರಿಸಲು ಗೋವಾ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು.
ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರ ಮಾಡಿ ಹೊಸ ಗ್ರಾಮಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಸಿದ್ಧವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಲಾಗಿದೆ ಎಂದು ಹೇಳಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಗಂಜಿ ಕೇಂದ್ರಗಳಿಗೆ ತೆರಳಿ ಹಣ ವಸೂಲಿಗೆ ಮುಂದಾಗಿರುವ ಕುರಿತು ಕೋಡಿಹಳ್ಳಿ ಚಂದ್ರಶೇಖರ್ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅವುಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ತಕ್ಷಣವೇ ರಾಯಚೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು ಕೂಡಲೇ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪ್ರಧಾನಿ ಮೋದಿ ಬೆಂಗಳೂರಿಗೆ ಬಂದರೂ ಪ್ರವಾಹದ ಬಗ್ಗೆ ಮಾತನಾಡದೆ ತೆರಳಿರುವುದು ದುಃಖದ ಸಂಗತಿ. ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ವೈಜ್ಞಾನಿಕವಾಗಿ ನಷ್ಟ ಸಮೀಕ್ಷೆ ಮಾಡಿ, ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು.
-ಕೋಡಿಹಳ್ಳಿ ಚಂದ್ರಶೇಖರ್, ರೈತ ಸಂಘದ ಅಧ್ಯಕ್ಷ