ಧಾರವಾಡ: ಜಿಲ್ಲಾಡಳಿತ, ಜಿಪಂ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಸಹಯೋಗದಲ್ಲಿ ಏ. 21ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದಿಂದಲೇ ರಾಜ್ಯ ಸರಕಾರಿ ನೌಕರ ದಿನ ಆಚರಿಸುತ್ತಿರುವ ಈ ಕಾರ್ಯಕ್ರಮ ರಾಷ್ಟ್ರದಲ್ಲಿಯೇ ಪ್ರಥಮವಾಗಿದೆ. ವಿವಿಧ ಸರಕಾರಿ ಇಲಾಖೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿ ಗುರುತಿಸಿ ಸತ್ಕರಿಸುವ ಮತ್ತು ಪ್ರೋತ್ಸಾಹಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದಿಂದ ನೀಡುವ ಪ್ರಸಕ್ತ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಪ್ರದಾನ ಮಾಡಲಿದ್ದಾರೆ. ಇನ್ನು ಮುಂದೆ ಪ್ರತಿ ವರ್ಷ ಇದೇ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
21ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲೆಯ ನೌಕರರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನೌಕರ ಸಂಘದ ಜಿಲ್ಲಾ ಘಟಕವು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.
ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಶಿಬಿರ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಬಸನಗೌಡ ಕರಿಗೌಡರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಶಿವಕುಮಾರ ಮಾನಕರ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ಧನಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಸುಬ್ಟಾಪುರಮಠ, ಗೌರವಾಧ್ಯಕ್ಷ ಆರ್.ಬಿ. ಲಿಂಗದಾಳ, ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ, ಕೋಶಾಧ್ಯಕ್ಷ ರಾಜಶೇಖರ ಬಾಣದ, ನೌಕರ ಭವನದ ಕಾರ್ಯದರ್ಶಿ ಗಿರೀಶ ಚೌಡಕಿ ಇದ್ದರು.