Advertisement

State Govt; ಜಾತಿ ಗಣತಿ ವಿರುದ್ಧ ಹೈಕೋರ್ಟ್‌ಗೆ ಮತ್ತೊಂದು ಪಿಐಎಲ್‌

08:16 PM Mar 26, 2024 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಬಹುಚರ್ಚಿತ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯನ್ನು ಆಕ್ಷೇಪಿಸಿ ಹೈಕೋರ್ಟ್‌ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

Advertisement

ಈ ವಿಚಾರವಾಗಿ ಬೆಂಗಳೂರಿನ ಕೆ.ಸಿ. ಶಿವರಾಮ್‌ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್‌. ರವಿಶಂಕರ್‌ ಅವರ ವಾದವನ್ನು ಕೆಲಕಾಲ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿತು. ಅಲ್ಲದೆ ಜಾತಿ ಗಣತಿ ಸಂಬಂಧ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಜೂನ್‌ 5ಕ್ಕೆ ಮುಂದೂಡಿತು.

ಜಾತಿ ಆಧಾರಿತ ಗಣತಿಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಆಯೋಗಕ್ಕೆ ಸೂಚನೆ ನೀಡಬೇಕು. ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಆಯೋಗಕ್ಕೆ 2014ರ ಜ.23ರಂದು ನೀಡಿರುವ ಆದೇಶವನ್ನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ ಎಂದು ಘೋಷಿಸಬೇಕು.

ಎಲ್ಲಾ ಜಾತಿ ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯನ್ನು ಸಮಗ್ರವಾಗಿ ಮತ್ತು ವೈಜ್ಞಾನಿಕವಾಗಿ ನಡೆಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯೊಂದನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next