ಚಿಕ್ಕಬಳ್ಳಾಪುರ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಪುನರ್ವಸತಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಾದ ಪರಿಹಾರ ತರುವುದಕ್ಕಿಂತ ನೆರೆ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪ್ರಚಾರ ಪಡೆದಿದ್ದೇ ಹೆಚ್ವು ಎಂದು ಮಾಜಿ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಟೀಕಿಸಿದರು.
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಕೆವಿಟಿ ಪಾಲಿಟೆಕ್ನಿಕ್ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸರ್.ಎಂ.ವಿ.ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರೇ ಹೇಳಿರುವಂತೆ ನೆರೆ ಹಾವಳಿಯಿಂದ 38 ಸಾವಿರ ಕೋಟಿ ನಷ್ಟ ಉಂಟಾಗಿದೆ. ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಗಳನ್ನು ಖುದ್ದು ಕೇಂದ್ರ ಸಚಿವರು ಸಮೀಕ್ಷೆ ನಡೆಸಿ ಹೆಚ್ವಿನ ಪರಿಹಾರ ನೀಡುವುದಾಗಿ ಭರವಸೆ ನೀಡಿ ಹೋದರು. ಆದರೆ ಕೇಂದ್ರ ಸರ್ಕಾರ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ 3800 ಕೋಟಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ. ಆ ಮೂಲಕ ರಾಜ್ಯ ಸರ್ಕಾರ ಸಲ್ಲಿಸಿದ್ದ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದೆ. ಅಂದರೆ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರ ವಿಚಾರದಲ್ಲಿ ಪ್ರಚಾರ ಪಡೆದುಕೊಂಡಿದ್ದು ಬಿಟ್ಟರೆ ಪರಿಹಾರ ಒದಗಿಸಲಿಲ್ಲ. ಈ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೂಡ ವಿಫಲವಾಗಿದೆ. ಬರೀ ಬಾಯಿ ಮಾತಿನಲ್ಲಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರೆ ಸಾಕೆ ಎಂದು ಮಾಜಿ ಸಚಿವ ಶಿವಶಂಕರರೆಡ್ಡಿ ಬಿಜೆಪಿ ಸರ್ಕಾರದ ದೋರಣೆಯನ್ನು ತರಾಟೆಗೆ ತೆಗೆದುಕೊಂಡರು.
ಶೀಘ್ರ ವಿಪಕ್ಷ ನಾಯಕ ಆಯ್ಕೆ
ರಾಜ್ಯ ವಿಧಾನಸಭೆಯ ಪ್ರತಿ ಪಕ್ಷದ ನಾಯಕನ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಇದೇ ವೇಳೆ ಮಾಜಿ ಸಚಿವ ಶಿವಶಂಕರರೆಡ್ಡಿ ತಿಳಿಸಿದರು.
ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉತ್ತರ ಕರ್ನಾಟಕದ ಪ್ರವಾಸದಲ್ಲಿ ಇದ್ದಾರೆ. ಶೀಘ್ರದಲ್ಲೇ ವಿಪಕ್ಷ ನಾಯಕರ ಆಯ್ಕೆ ಮಾಡಲಾಗುತ್ತದೆ ಎಂದರು