ಮಂಡ್ಯ: ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಜ.೪, ೫ರಂದು ನಡೆಯಲಿರುವ ರಾಜ್ಯ ಮಟ್ಟದ ಯುವ ಜನೋತ್ಸವ ಹಿನ್ನೆಲೆಯಲ್ಲಿ ಭಾನುವಾರ ಲಾಂಛನ ಬಿಡುಗಡೆ ಮಾಡಲಾಯಿತು.
ಆದಿಚುಂಚನಗಿರಿ ಮಠದಲ್ಲಿ ಭಾನುವಾರ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಯುವ ಜನೋತ್ಸವದ ಲಾಂಛನ ಬಿಡುಗಡೆ ಮಾಡಿದರು.
ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಮಾತನಾಡಿ, ಜಿಲ್ಲೆಯಲ್ಲಿ ಯುವ ಜನೋತ್ಸವ ನಡೆಯುತ್ತಿರುವುದು ಮಂಡ್ಯ ಜಿಲ್ಲೆಗೆ ಹೆಮ್ಮೆ ತರುವಂಥ ವಿಷಯವಾಗಿದ್ದು, ಯುವಕ, ಯುವತಿಯರಲ್ಲಿ ಅಡಗಿರುವ ಪ್ರತಿಭೆಯ ಸೃಜನಶೀಲ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸಲು ರಾಜ್ಯ ಮಟ್ಟದ ಯುವ ಜನೋತ್ಸವ ಹಮ್ಮಿಕೊಳ್ಳಲಾಗಿದೆ. ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜ.೪ ಮತ್ತು ೫ ರಂದು ನಡೆಯಲಿದೆ ಎಂದು ತಿಳಿಸಿದರು.
೪ರಂದು ಬೆಳಿಗ್ಗೆ ೧೧.೩೦ಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್‌ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದು, ೫ರಂದು ಮಧ್ಯಾಹ್ನ ೩ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸಲು ಯುವ ಜನೋತ್ಸವ ಆಚರಿಸಲಾಗುತ್ತಿದೆ. ಯುವ ಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಗಾಯನ, ವಾದ್ಯ, ನೃತ್ಯ, ಏಕಾಂಗಿ ನಾಟಕ, ಆಶುಭಾಷಣ ಸ್ಪರ್ಧೆ ಸೇರಿದಂತೆ ಸುಮಾರು ೧೮ ಪ್ರಕಾರದ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ಜಿಲ್ಲೆಯಿಂದ ತಲಾ ೫೭ ಸ್ಪರ್ಧಿಗಳಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಸ್ಪರ್ಧಿಗಳು ಆಗಮಿಸಲಿದ್ದಾರೆ. ಎರಡೂ ಸಾವಿರಕ್ಕೂ ಅಧಿಕ ಮಂದಿ ಈ ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್ ನಿಯಮದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜನದಟ್ಟಣೆ ಉಂಟಾಗದ ರೀತಿ ೧ ಪ್ರಮುಖ ವೇದಿಕೆ ಸೇರಿ ೫ ವೇದಿಕೆಗಳನ್ನ ನಿರ್ಮಿಸಲಾಗಿದೆ. ಜತೆಗೆ ಒಂದು ತುರ್ತು ತೆರೆದ ವೇದಿಕೆ ಕೂಡ ನಿರ್ಮಿಸಲಾಗಿದೆ. ಅರ್ಹ ಪ್ರತಿಭೆಗಳನ್ನು ಗುರುತಿಸಿ ರಾಷ್ಟçಮಟ್ಟದ ಯುವಜನೋತ್ಸವಕ್ಕೆ ಕಳುಹಿಸಿಕೊಡುವ ಸಲುವಾಗಿ ೩೦ ತೀರ್ಪುಗಾರರನ್ನು ನಿಯೋಜಿಸಲಾಗಿದೆ. ಯುವ ಜನೋತ್ಸವಕ್ಕೆ ಬರುವ ಪ್ರತಿಯೊಬ್ಬರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಯುವಜನೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸ್ಪರ್ಧಿಗಳ ಬಹುಮಾನ ಮೊತ್ತವನ್ನು ಹೆಚ್ಚಿಸಲು ಕ್ರಮ ವಹಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಿಗೆ ಮೊದಲ ಬಹುಮಾನ ೧೫ ಸಾವಿರ ರೂ., ಎರಡನೇ ಬಹುಮಾನ ೧೦ ಸಾವಿರ ರೂ., ಮೂರನೇ ಬಹುಮಾನ ೫ ಸಾವಿರ ರೂ., ಗುಂಪುಗಳಿಗೆ ನೀಡುವ ಮೊದಲ ಬಹುಮಾನ ೨೫ ಸಾವಿರ ರೂ., ಎರಡನೇ ಬಹುಮಾನ ೧೫ ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ, ಶಾಸಕ ಕೆ.ಸುರೇಶ್‌ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಹಲವರಿದ್ದರು.