ಬೆಂಗಳೂರು:ರಾಜ್ಯ ಸರ್ಕಾರ ನವೆಂಬರ್ 10ರಂದು ಆಚರಿಸಲು ನಿರ್ಧರಿಸಿರುವ ಟಿಪ್ಪು ಸುಲ್ತಾನ್ ಜಯಂತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಶುಕ್ರವಾರ ಬೆಂಗಳೂರು, ರಾಮನಗರ, ಚಿತ್ರದುರ್ಗ, ಯಾದಗಿರಿ, ಮಡಿಕೇರಿ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮತಾಂಧ, ಧರ್ಮ ವಿರೋಧಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ಶಾಸಕ ಕೆಜಿ ಬೋಪಯ್ಯ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳದೇ ಇರುವುದನ್ನು ಸ್ವಾಗತಿಸುತ್ತೇವೆ. ಆದರೆ ವಿಶ್ರಾಂತಿಯ ನೆಪದಿಂದ ಓಡಿ ಹೋಗಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದಾರೆ.
ಟಿಪ್ಪು ಜಯಂತಿ ವಿರೋಧಿಸಿ ತುಮಕೂರು ಬಾಗಲಕೋಟೆ, ಮಂಡ್ಯ, ಮಂಗಳೂರು, ಚಿಕ್ಕಮಗಳೂರು, ಮಡಿಕೇರಿ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.