ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಟೀಕಿಸಿದರು.
ನಗರದಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಧನೆಗಳ ಕುರಿತು ಮಾತನಾಡುವಾಗ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಡೀ ವಿಶ್ವ ಹಾಗೂ ದೇಶದ ಜನತೆ ಪ್ರಧಾನಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಎರಡನೇ ಅವಧಿಗೆ ಆಯ್ಕೆ ಮಾಡಿ, ಬೆಂಬಲ ನೀಡಿದಾಗ ಸಿದ್ದರಾಮಯ್ಯನವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಕೇವಲ ಸುಳ್ಳು ಆರೋಪಗಳ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದರು.
ದೇಶದ ಆಟೋ, ಟ್ಯಾಕ್ಸಿ ಚಾಲಕರ ಬ್ಯಾಂಕ್ ಖಾತೆಗೆ 5 ಸಾವಿರ ರೂ. ಪರಿಹಾರ ಧನ ಜಮೆ ಮಾಡಲಾಗುತ್ತದೆ. ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ಅಸಮಾಧಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದರಲ್ಲಿ ಸಂಶಯ ಬೇಡ ಎಂದು ಸ್ಪಷ್ಟನೆ ನೀಡಿದರು.
ಗ್ರಾಪಂ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸಮಿತಿ ರಚನೆ ಮಾಡಿಲ್ಲ. ಈ ಕುರಿತು ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಆದರೆ, ಕಾಂಗ್ರೆಸ್ ಪಕ್ಷದವರು ಮುಂದಾಲೋಚನೆಯಿಂದ ನ್ಯಾಯಾಲಯಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ನ್ಯಾಯಾಲಯಕ್ಕೆ ಏಕೆ ಹೋಗುತ್ತಾರೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಡಾ|ವೀರಣ್ಣ ಚರಂತಿಮಠ, ಮಾಜಿ ಶಾಸಕ ಪಿ.ಎಚ್. ಪೂಜಾರ ಉಪಸ್ಥಿತರಿದ್ದರು.