Advertisement

“ಭಾಗ್ಯ”ಗಳಿಂದ ರಾಜ್ಯದ GDP ವೃದ್ಧಿ: ಸಿಎಂ

10:26 PM Aug 11, 2023 | Team Udayavani |

ಅಥಣಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಕೊಕಟನೂರಿನಲ್ಲಿ ಶುಕ್ರವಾರ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ ಎಂದರು.

Advertisement

ಇದಕ್ಕಿಂತ ಮುಖ್ಯವಾಗಿ ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು 2 ಸಾವಿರ ರೂ.ನೀಡುವ “ಗೃಹಲಕ್ಷ್ಮೀ’ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ. ಈ ಯೋಜನೆಗೆ ವರ್ಷಕ್ಕೆ 35 ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು ಆ.27ರಂದು ಬೆಳಗಾವಿಯಲ್ಲೇ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರ್ಕಾರದ ಸಾಧನೆಯು ವಿಪಕ್ಷವನ್ನು ಕಂಗೆಡಿಸಿದೆ. ಅವರು ಹತಾಶರಾಗಿದ್ದಾರೆ. ಇದರಿಂದ ನಾವು ಹಿಂದೆ ಸರಿಯುವುದಿಲ್ಲ. ಏನೇ ಆದರೂ ಸರ್ಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು. ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರ್ಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂದರು.

ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಈಗ ಅಥಣಿ ತಾಲೂಕಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಕೊಡುಗೆ ಅಪಾರವಾಗಿದೆ. ಆಯಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಸವದಿ ಸಾಧನೆ ಅಭಿನಂದನಾರ್ಹ. ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಅಥಣಿ ಹಾಗೂ ಕಾಗವಾಡ ಕ್ಷೇತ್ರದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಅಥಣಿ ಶಾಸಕರ ನೀರಾವರಿ ಯೋಜನೆಗಳ ಕನಸು ದೊಡ್ಡದಾಗಿವೆ. ಇಡೀ ಕ್ಷೇತ್ರದ ಜನರ ಬದುಕು ಹಸನಾಗಿಸಲು ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅವರು ಬಯಸಿದ್ದಾರೆ. ಈ ಭಾಗದ ಜನರು ಮಾತ್ರವಲ್ಲ, ಜಾನುವಾರುಗಳ ಅನುಕೂಲಕ್ಕಾಗಿ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಶಾಸಕ ಲಕ್ಷ¾ಣ ಸವದಿ ಸ್ಥಾಪಿಸುವ ಮೂಲಕ ತಮ್ಮ ಕಳಕಳಿ ಪ್ರದರ್ಶಿಸಿದ್ದಾರೆ ಎಂದರು.

Advertisement

ನೀರು ವಿನಿಮಯ ಒಪ್ಪಂದಕ್ಕೆ ಮನವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಮಹಾರಾಷ್ಟ್ರಕ್ಕೆ ಮಳೆಗಾಲದಲ್ಲಿ ನಾಲ್ಕು ಟಿಎಂಸಿ ಅಡಿ ನೀರು ನೀಡಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿಎಂಸಿ ಅಡಿ ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.

ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು. 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಿಯಿಂದ ವಂಚಿತಗೊಂಡಿದ್ದು, ನೀರಾವರಿಗೆ ಅವಕಾಶ ಕಲ್ಪಿಸಬೇಕು. ಅದೇ ರೀತಿ 9 ಹಳ್ಳಿಗಳು ಮತ್ತು ಜಮೀನು ಸವಳು-ಜವಳು ಸಮಸ್ಯೆಯಿಂದ ಬಾಧಿತಗೊಂಡಿವೆ. ಇದಕ್ಕೆ ಪರಿಹಾರ ಕಲ್ಪಿಸಬೇಕು. ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ತಕ್ಷಣಕ್ಕೆ 20 ಕೋಟಿ ಒದಗಿಸಬೇಕು. ಅಥಣಿ ಭಾಗದ ಒಣ ದ್ರಾಕ್ಷಿಯನ್ನು ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕ ಆಹಾರ ತಯಾರಿಕೆಗೆ ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಕಾಗವಾಡ ಶಾಸಕ ಭರಮಗೌಡ ಕಾಗೆ ಮಾತನಾಡಿ, ನೂತನ ಕಾಗವಾಡ ತಾಲೂಕಿಗೆ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಮೂಲಸೌಕರ್ಯ ಒದಗಿಸಬೇಕು. ತಾಲೂಕಿನ ಎರಡು ಹೋಬಳಿಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ ಅಥಣಿಯ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಭೋಸರಾಜು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಬೀದರ್‌ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ|ಕೆ.ಸಿ.ವೀರಣ್ಣ ಇದ್ದರು.

ವೈದ್ಯರು, ಔಷಧಿಗಳ ಕೊರತೆಯ ಮಧ್ಯೆಯೂ ಪಶುಸಂಗೋಪನೆ ಇಲಾಖೆ ಉತ್ತಮ ಸೇವೆ ಒದಗಿಸುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನುವಾರುಗಳು ಇರುವ ಬೆಳಗಾವಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಇದನ್ನು ಪರಿಗಣಿಸಿ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಬದ್ಧ.
-ಕೆ.ವೆಂಕಟೇಶ್‌, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ

ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಮೂರು ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದ್ದು, ಆ.27ರಂದು ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗುವುದು. ಬೆಳಗಾವಿಯಲ್ಲಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಲಿದೆ.
-ಲಕ್ಷ್ಮೀ ಹೆಬ್ಟಾಳ್ಕರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

Advertisement

Udayavani is now on Telegram. Click here to join our channel and stay updated with the latest news.

Next