ಬೆಂಗಳೂರು: ದೇಶದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸಿಕ್ಕಿರುವ ಸ್ಥಾನಮಾನಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವೇ ಕಾರಣ ಎಂದು ಸಂಸದ ಪಿ.ಸಿ.ಮೋಹನ್ ಹೇಳಿದರು.
ಶಾಂತಿನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಘಟಕವು ಆಸ್ಟಿನ್‌ಟೌನ್‌ನ ಜಸ್ಮಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರ ಭಾವಚಿತ್ರವನ್ನು ಬಳಸಿಕೊಂಡು 60 ವರ್ಷ ದೇಶವನ್ನಾಳಿದೆ. ಆದರೆ ಅಂಬೇಡ್ಕರ್ ಅವರಿಗೆ ಯಾವುದೇ ಸ್ಥಾನಮಾನ ನೀಡಲಿಲ್ಲ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಂಬೇಡ್ಕರ್ ಅವರ ಹೆಸರು, ಕೊಡುಗೆಯನ್ನು ಚಿರಸ್ಥಾಯಿಯಾಗಿ ಉಳಿಸಲು ಸಾಕಷ್ಟು ಕ್ರಮ ಕೈಗೊಂಡಿದೆ. ಇನ್ನಾದರೂ ಕಾಂಗ್ರೆಸ್ ಅಂಬೇಡ್ಕರ್ ಅವರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಿ ಎಂದು ಹೇಳಿದರು.
ಸಂಸದ ಶಿವಕುಮಾರ್ ಉದಾಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದಿಂದಾಗಿ ಜಗತ್ತಿನಲ್ಲೇ ಅತ್ಯುತ್ತಮವಾದ ಸಂವಿಧಾನವನ್ನು ದೇಶ ಪಡೆದಿದೆ. ಅಂಬೇಡ್ಕರ್ ಅವರ ಶ್ರಮದಿಂದಾಗಿ ದೇಶದಲ್ಲಿ ತಳ ಸಮುದಾಯದವರಿಗೂ ಸಮಾನ ಅವಕಾಶ ಸಿಗುವಂತಾಗಿದೆ ಎಂದು ಹೇಳಿದರು. ಬಿಜೆಪಿ ಮುಖಂಡ ವಾಸುದೇವಮೂರ್ತಿ ಇತರರು ಉಪಸ್ಥಿತರಿದ್ದರು.
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹಂಚಿಕೆ ಮಾಡಲು ಆಹಾರ ಸಿದ್ಧಪಡಿಸಲಾಗಿತ್ತು. ಆದರೆ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಆಹಾರ ವಿತರಿಸುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುವ ಹಿನ್ನೆಲೆಯಲ್ಲಿ ವಿತರಣೆಗೆ ಅವಕಾಶ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಪೌರ ಕಾರ್ಮಿಕರು ಆಹಾರವನ್ನು ವಿಲೇವಾರಿ ಮಾಡಿದರು.