Advertisement

2017ರಲ್ಲೇ “ಸ್ಟೀಲ್‌ ಬ್ರಿಡ್ಜ್’ಕೈ ಬಿಟ್ಟಿದ್ದೇವೆ!

07:19 AM Jun 19, 2019 | Lakshmi GovindaRaj |

ಬೆಂಗಳೂರು: ವಿವಾದಿತ “ಸ್ಟೀಲ್‌ ಬ್ರಿಡ್ಜ್’ ಯೋಜನೆಯನ್ನು 2017ರಲ್ಲೇ ಕೈಬಿಟ್ಟಿರುವುದಾಗಿ ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಸರ್ಕಾರದ ಈ ಯೋಜನೆಯನ್ನು ಪ್ರಶ್ನಿಸಿ “ನಮ್ಮ ಬೆಂಗಳೂರು ಪ್ರತಿಷ್ಠಾನ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ. ಎಚ್‌.ಟಿ.ನರೇಂದ್ರಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.

ಅರ್ಜಿ ವಿಚಾರಣೆಗೆ ಬಂದಾಗ, “ನಗರದ ಬಸವೇಶ್ವರ ವೃತ್ತದಿಂದ (ಚಾಲುಕ್ಯ ಸರ್ಕಲ್‌) ಹೆಬ್ಟಾಳದವರೆಗಿನ ಉದ್ದೇಶಿತ ಆರು ಪಥದ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆಯನ್ನು ಕೈಬಿಟ್ಟು 2017ರ ಮೇ 4ರಂದು ಸರ್ಕಾರ ನಿರ್ಣಯ ತೆಗೆದುಕೊಂಡಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಯೋಜನೆ ಕೈಬಿಟ್ಟಿರುವುದಾಗಿ ಸರ್ಕಾರ ಹೇಳಿರುವುದರಿಂದ ಉದ್ದೇಶಿತ ಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯು ವಿಚಾರಣೆಯ ಮಾನ್ಯತೆ ಕಳೆದುಕೊಳ್ಳಲಿದೆ. ಹಾಗಾಗಿ, ಈ ಹಂತದಲ್ಲಿ ಅರ್ಜಿ ವಿಚಾರಣೆ ಮುಂದುವರಿಸುವ ಅವಶ್ಯಕತೆಯಿಲ್ಲ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು.

ಆದೇಶದಲ್ಲಿ ಏನಿದೆ?: ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಲಿ-ಮೆರಿಡಿಯನ್‌ ಹೋಟೆಲ್‌ ಹಾಗೂ ಮೇಖ್ರೀ ವೃತ್ತದ ಮುಖಾಂತರ ಹೆಬ್ಟಾಳದ ಮೇಲು ಸೇತುವೆ ಸಂಪರ್ಕಿಸುವ ಆರು ಪಥದ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು.

Advertisement

2017ರ ಮಾ.2ರಂದು ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ನಗರ ವ್ಯಾಪ್ತಿಯ ಬಹುತೇಕ ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರು, ಈ ಯೋಜನೆಗೆ ಪರಿಸರವಾದಿಗಳಿಂದ, ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಯೋಜನೆ ಅನುಷ್ಠಾನದಲ್ಲೂ ಸಾಕಷ್ಟು ವಿಳಂಬವಾಗಿದೆ. ಹೀಗಾಗಿ ಈ ಯೋಜನೆಯನ್ನು ಕೈಬಿಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಯೋಜನೆಯನ್ನು ಕೈ ಬಿಡಲಾಗಿದೆ ಎಂದು 2017ರ ಮೇ 4ರಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿದ ಆದೇಶದಲ್ಲಿ ಹೇಳಲಾಗಿದೆ.

ಪ್ರಕರಣವೇನು?: ನಗರದ ಬಸವೇಶ್ವರ ವೃತ್ತದಿಂದ ಹೆಬ್ಟಾಳದವರೆಗೆ ಅಂದಾಜು 1,800 ಕೋಟಿ ರೂ. ವೆಚ್ಚದಲ್ಲಿ ಆರು ಪಥದ ಉಕ್ಕಿನ ಮೇಲ್ಸೇತುವೆ ನಿರ್ಮಾಣಕ್ಕೆ 2016ರ ಅ.13ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಉದ್ದೇಶಿತ ಈ ಯೋಜನೆಗೆ ಆಗ ಪ್ರತಿಪಕ್ಷದಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷ, ಪರಿಸರವಾದಿಗಳು ಸೇರಿ ಹಲವು ನಾಗರಿಕ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು.

ಈ ಮಧ್ಯೆ ಯೋಜನೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನಮ್ಮ ಬೆಂಗಳೂರು ಪ್ರತಿಷ್ಠಾನ, ಯೋಜನೆ ಕೈಬಿಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿತ್ತು ಈ ನಡುವೆ ಯೋಜನೆಯ ವಿವಾದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಮೇಟ್ಟಿಲೇರಿತ್ತು. ಹೀಗಾಗಿ, ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಂಡು, ಗೊಂದಲ ಮುಂದುವರಿದಿತ್ತು. ಇದೀಗ ಈ ಗೊಂದಲಕ್ಕೆ ತೆರೆ ಬಿದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next