ಉಡುಪಿ: ಪೌರಾಡಳಿತ ಇಲಾಖೆಯಲ್ಲಿ ಶೀಘ್ರ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದೆಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಖಾಲಿ ಇರುವ ವಿವಿಧ 3,000 ಹುದ್ದೆಗಳ ನೇಮಕಾತಿ ಕುರಿತಂತೆ ಕೆಪಿಎಸ್‌ಸಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲಿ ಸಿಬಂದಿ ಕೊರತೆ ಮಾಯವಾಗಲಿದೆ. ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ನೇಮಕಾತಿ ಪ್ರಕಟನೆ ಹೊರಡಿಸಲಾಗಿದೆ. ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿದೀಪ ನಿರ್ವಹಣೆಗೆ ಎಲ್‌ಇಡಿ ಸೋಲಾರ್ ದೀಪ ಅಳವಡಿಸುವ ಕುರಿತು ಸೂಚನೆ ನೀಡಲಾಗಿದೆ. ಎಲ್‌ಇಡಿ ಬಳಕೆಯಿಂದ ಶೇ. 70 ವಿದ್ಯುತ್ ಉಳಿತಾಯ ಸಾಧ್ಯವಾಗಲಿದೆ ಎಂದರು.
ಅಮೃತ್ ಯೋಜನೆ-ಅಸಮಾಧಾನ: ಉಡುಪಿ ಜಿಲ್ಲೆಯಲ್ಲಿ ಅಮೃತ್ ಯೋಜನೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ನಡೆಯದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಘನತ್ಯಾಜ್ಯ ವಿಲೇವಾರಿಯನ್ನು ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ರೀತಿಯಲ್ಲಿ ಅಳವಡಿಸಿಕೊಳ್ಳುವಂತೆ ಸೂಚಿಸಿದರು. ನಗರೋತ್ಥಾನ 3ನೇ ಹಂತದ ಕಾಮಗಾರಿಗಳನ್ನು ಶೀಘ್ರವೇ ಪ್ರಾರಂಭಿಸುವಂತೆ ಸೂಚಿಸಿದ ಸಚಿವರು, ನಗರೋತ್ಥಾನ, ಎಸ್.ಎಫ್.ಸಿ., ವಿಶೇಷ ಎಸ್.ಎಫ್.ಸಿ. ಸೇರಿದಂತೆ ವಿವಿಧ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಸಮಯ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಸಮಯ ಮಿತಿಯಲ್ಲಿ ನೀಡಬೇಕು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವಂತೆ ಅವರು ಸೂಚಿಸಿದರು.
ಸಚಿವ ಪ್ರಮೋದ್ ಮಧ್ವರಾಜ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭಾ ಹಾಗೂ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.