Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾದರಿ ಆಯುಷ್ ಆಸ್ಪತ್ರೆ, ಆರೋಗ್ಯ ನಗರ ಮಾಡಲು ಕ್ರಮ: ಸುಧಾಕರ್

09:49 PM Oct 15, 2020 | mahesh |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳನ್ನು ಸಮಾನವಾಗಿ ಅಭಿವೃಧ್ಧಿಗೊಳಿಸುವ ಜೊತೆಗೆ ಜಿಲ್ಲೆಯಲ್ಲಿ ಮಾದರಿ ಆಯುಷ್ ಆಸ್ಪತ್ರೆ ಮತ್ತು ಆರೋಗ್ಯ ನಗರವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ವೈದ್ಯಕೀಯ,ಆರೋಗ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Advertisement

ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ್ ಎಂ.ಗೌಡ ಪರವಾಗಿ ಆಯೋಜಿಸಿದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಮಾಡಲು ಸರ್ಕಾರ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಇಂತಹ ಕ್ಲಿಷ್ಟಕರ ಮತ್ತು ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಲು ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯ ಮುಖಂಡರು ಅವಕಾಶ ಕಲ್ಪಿಸಿದ್ದಾರೆ ಆರೋಗ್ಯ ಇಲಾಖೆಯ ಮುಂದಿರುವ ಸವಾಲುಗಳನ್ನು ಎದುರಿಸಿ ನೂನ್ಯತೆಗಳನ್ನು ಸರಿಪಡಿಸುವ ಮೂಲಕ ಮುಖ್ಯಮಂತ್ರಿಗಳ ಮತ್ತು ರಾಜ್ಯದ ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.

ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಿ ತದನಂತರ ಜಾತ್ಯಾತೀತವಾಗಿ ಹಾಗೂ ಪಕ್ಷಾತೀತವಾಗಿ ಜಿಲ್ಲೆಯನ್ನು ಅಭಿವೃದ್ದಿಗೊಳಿಸಿ ಜನರ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿವುದು ನನ್ನ ಮುಖ್ಯ ಗುರಿ ಎಂದು ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಆರೋಗ್ಯ, ಕೃಷಿ, ಮಹಿಳಾ ಮತ್ತು ಯುವಕರ ಸಬಲೀಕರಣಕ್ಕೆ ವಿಶೇಷ ಒತ್ತು ನೀಡುತ್ತೇನೆ ಪದವೀಧರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಸಚಿವರು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ತು ಮತ್ತು ವಿಧಾನಸಭೆಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದಾರೆ ಇಂದು ಕೋವಿಡ್ ಮಹಾಮಾರಿ ಸಾಂಕ್ರಾಮಿಕ ರೋಗ ವಿಶ್ವದಲ್ಲಿ ವ್ಯಾಪಕವಾಗಿ ಹರಡುತ್ತಿದ್ದರೂ ಸಹ 130 ಕೋಟಿ ಜನ ಸಂಖ್ಯೆ ಹೊಂದಿರುವ ಭಾರತ ರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಿದೆ ಎಂದರಲ್ಲದೆ ಕರ್ನಾಟಕ ರಾಜ್ಯದಲ್ಲಿ ಸೋಂಕು ನಿಯಂತ್ರಿಸುವ ಜೊತೆಗೆ ಸಾವಿನ ಪ್ರಮಾಣ 1.4 ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದರೂ ನಾಗರೀಕರು ಆತಂಕಗೊಳ್ಳುವುದು ಅನಗತ್ಯ ಆದರೆ ಸಾವಿನ ಪ್ರಮಾಣ ಹೆಚ್ಚಾದರೆ ಮಾತ್ರ ಚಿಂತಿಸಬೇಕು ಸರ್ಕಾರ ಕೊರೊನಾ ಸೋಂಕು ಪತ್ತೆ ಹಚ್ಚಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಸಾಧನೆ ಏನು? ಆಗ್ನೆಯ ಪದವೀಧರ ಕ್ಷೇತ್ರದಲ್ಲಿ 6 ವರ್ಷಗಳ ಕಾಲ ಪ್ರತಿನಿಧಿಸಿದ ಪ್ರತಿನಿಧಿಯ(ಚೌಡರೆಡ್ಡಿ) ಸಾಧನೆ ಏನು ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಸಮುದಾಯ ಮತ್ತು ಪದವೀಧರರ ಕಲ್ಯಾಣಕ್ಕಾಗಿ ಅವರು ಏನು ಮಾಡಿದ್ದಾರೆ ಎಂಬುದನ್ನು ಮತದಾರರು ಪ್ರಶ್ನಿಸಬೇಕು ಎಂದ ಸಚಿವರು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಪದವೀಧರರು ತಮ್ಮ ಅಮೂಲ್ಯ ಮತವನ್ನು ವ್ಯರ್ಥ ಮಾಡದೆ ಬಿಜೆಪಿ ಅಭ್ಯರ್ಥಿ ಚಿದಾನಂದ್ ಎಂ ಗೌಡ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಹುಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿ ಕ್ಷೇತ್ರದಲ್ಲಿ ಪದವೀಧರರ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.

Advertisement

ಆಗ್ನೆಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ: ರಾಜ್ಯದ ಇತಿಹಾಸದಲ್ಲಿ ಆಗ್ನೆಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇದುವರೆಗೂ ಗೆಲುವು ಸಾಧಿಸಿಲ್ಲ ಸಾಧಿಸುವುದೂ ಇಲ್ಲ ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಉಸ್ತುವಾರಿ ಸಚಿವರು ವಿಶ್ವಾಸ ವ್ಯಕ್ತಪಡಿಸಿ ಪದವೀಧರರ ಮತದಾರರು ಯಾರು ಉತ್ತಮರು ಎಂದು ತಿಳಿದಿದ್ದಾರೆ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸ್ವತಃ ಉಪನ್ಯಾಸಕರಾಗಿದ್ದಾರೆ ಹೀಗಾಗಿ ಅವರನ್ನು ಆಯ್ಕೆ ಮಾಡಿ ರಾಜ್ಯ ಮತ್ತು ಕ್ಷೇತ್ರವನ್ನು ಮಾದರಿಯಾಗಿ ಅಭಿವೃಧ್ಧಿಗೊಳಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಶಿಕ್ಷಣ ತಜ್ಞ ಕೋಡಿರಂಗಪ್ಪ,ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ ಪದವೀಧರರ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ, ಮುಖಂಡರಾದ ಅಪ್ಪಾಲು ಮಂಜು, ರವೀಂದ್ರರೆಡ್ಡಿ, ಗೋವಿಂದಸ್ವಾಮಿ, ಚನ್ನಕೃಷ್ಣರೆಡ್ಡಿ, ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next