Advertisement
ಸಂತ್ರಸ್ತರು ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿದ ಅವರು, ಒಂದು ವೇಳೆ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿದ್ದರೆ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
Related Articles
Advertisement
ಸಾಲ ನೀಡುವಾಗ ಕೆಲವು ಖಾಸಗಿ ಬ್ಯಾಂಕುಗಳು ಖಾಲಿ ಚೆಕ್ ಪಡೆದುಕೊಳ್ಳಲು ಅವಕಾಶಗಳಿಲ್ಲ. ಮುಂದಿನ ದಿನಾಂಕಗಳನ್ನು ನಮೂದಿಸಿ ಚೆಕ್ ಪಡೆಯುವ ಪದ್ಧತಿ ಇದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿ ಖಾಲಿ ಚೆಕ್ ಪಡೆದುಕೊಂಡರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು ಸರಕಾರದ ವಿವಿಧ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ಯಾವುದೇ ರೀತಿಯ ಪಿಂಚಣಿಯನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡುವ ಪ್ರಕ್ರಿಯೆಯಲ್ಲಿ ವಿಳಂಬ ಆಗುತ್ತಿದೆ. ಇದೇ ಕಾರಣದಿಂದ ಜನರು ಅನಿವಾರ್ಯವಾಗಿ ಖಾಸಗಿ ಬ್ಯಾಂಕುಗಳ ಮೊರೆ ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ರಾಷೀr್ರಕೃತ ಬ್ಯಾಂಕುಗಳು ಸಾಧ್ಯವಾದಷ್ಟು ಸಾಲ ನೀಡುವ ಪ್ರಕ್ರಿಯೆಗಳನ್ನು ಸರಳಗೊಳಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಪ್ರಕಾಶ ನಾಯಕ ಮಸಗುಪ್ಪಿ, ಅನೇಕ ಗ್ರಾಮಗಳಲ್ಲಿ ಕೆಲ ಬ್ಯಾಂಕ್‌ಗಳು ಪರಿಹಾರ ಕೇಂದ್ರಗಳಿಗೆ ತೆರಳಿ ಸಾಲ ವಸೂಲಾತಿಗೆ ಮುಂದಾಗಿರುವುದು ದುರ್ದೈವದ ಸಂಗತಿ. ಕೆಲವು ಖಾಸಗಿ ಬ್ಯಾಂಕುಗಳು ಸಾಲ ವಸೂಲಾತಿಗೆ ನೇಮಿಸಿರುವ ಏಜೆಂಟರು ಗೂಂಡಾಗಳ ರೀತಿ ವರ್ತಿಸಿ ಸಾಲ ಪಡೆದವರನ್ನು ಶೋಷಿಸಲಾಗುತ್ತಿದೆ ಎಂದು ದೂರಿದರು.
ಇದಕ್ಕೆ ಪೂರಕವಾಗಿ ಮಾತನಾಡಿದ ರೈತರು ಎಲ್ಲ ಬಗೆಯ ಸಾಲ ವಸೂಲಾತಿಯನ್ನು ತಕ್ಷಣವೇ ನಿಲ್ಲಿಸಬೇಕು. ರೈತರು ಹಾಗೂ ಗ್ರಾಮೀಣ ಜನರ ಶೋಷಣೆ ಮಾಡದೇ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು. ಬ್ಯಾಂಕ್ ನೋಟಿಸ್ ಹಾವಳಿಯಿಂದ ರೈತರು ಕಂಗೆಟ್ಟಿದ್ದಾರೆ. ಕೃಷಿ ಯಂತ್ರೋಪಕರಣಗಳನ್ನು ಜಪ್ತಿ ಮಾಡುವಾಗ ನಿಯಮಾವಳಿ ಪಾಲನೆ ಮಾಡುತ್ತಿಲ್ಲ. ಯಾವುದೇ ಮುನ್ಸೂಚನೆ ನೀಡದೇ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬ್ಯಾಂಕುಗಳು ಹಾಗೂ ಸರ್ಕಾರದಿಂದ ನೀಡಲಾಗುವ ಬೆಳೆಸಾಲವನ್ನು ಬೆಳೆಸಾಲ ಎಂದು ಕರೆಯದೇ ಬೆಳೆ ಸಹಾಯಧನ ಎಂದು ಪರಿಗಣಿಸಬೇಕು. ಕೃಷಿ ಸಾಲ ಪದದ ಬದಲಾಗಿ ಕೃಷಿ ಸಹಾಯಧನ ಎಂದು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಮಾತನಾಡಿ, ಹಲವಾರು ಬಾರಿ ನಿರ್ದೇಶನ ನೀಡಿದ ಮೇಲೂ ಕೆಲವು ಖಾಸಗಿ ಬ್ಯಾಂಕುಗಳು ಸಾಲ ವಸೂಲಾತಿಗೆ ಮುಂದಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಸಾಲ ಮರುಪಾವತಿಗೆ ಒತ್ತಾಯಿಸಿ ನೋಟಿಸ್ ನೀಡುವಂತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ರಾಷ್ಟ್ರೀಕೃತ, ಸಹಕಾರಿ ಮತ್ತು ಖಾಸಗಿ ಬ್ಯಾಂಕುಗಳ ಪ್ರತಿನಿಧಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.