Advertisement

ನಿಷೇಧಿತ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಿ

02:38 PM May 09, 2022 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ ಆಡಿ ತಿಳಿಸಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಮಾಲಿನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಾಸ್ಟಿಕ್‌ ಮಾರಾಟ ಮಾಡುವ ಅಂಗಡಿ, ಮಳಿಗೆಗಳು ಹಾಗೂ ಮಾಲ್‌ಗ‌ಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಸೂಚನೆ ನೀಡಬೇಕು. ಮಾರಾಟ ಮಾಡುವುದು ಕಂಡು ಬಂದಲ್ಲಿ, ಅಂತಹ ವ್ಯಾಪಾರಸ್ಥರಿಗೆ ದಂಡ ವಿಧಿಸಿ, ಕ್ರಮ ಕೈಗೊಳ್ಳಬೇಕು. ಹೆಚ್ಚಿನ ತ್ಯಾಜ್ಯಕ್ಕೆ ಕಾರಣವಾಗುತ್ತಿರುವ ಏಕ ಬಳಕೆಯ ಪ್ಲಾಸ್ಟಿಕ್‌ ವಸ್ತುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುವ ವ್ಯಾಪಾರಸ್ಥರಿಗೆ ದಂಡ ವಿಧಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕಾಂಪೋಸ್ಟ್‌ ಮಾಡಬಹುದಾದ ಪ್ಲಾಸ್ಟಿಕ್‌ ನಿಂದ ತಯಾರಿಸಿದ ಚೀಲಗಳಿಗೆ ಈ ನಿಷೇಧ ಅನ್ವಯವಾಗುವುದಿಲ್ಲ. ತ್ಯಾಜ್ಯ ವಿಂಗಡಣೆ, ವಿಲೇವಾರಿ ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ತ್ಯಾಜ್ಯ ವಿಲೇವಾರಿ ಕುರಿತು ಜನರಲ್ಲಿ ಅರಿವು ಮೂಡಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಿಂದಲೇ ಕಾರ್ಯಾಗಾರ ಹಮ್ಮಿಕೊಳ್ಳಬೇಕು. ನಿಗದಿಪಡಿಸಿದ ಜಾಗದಲ್ಲಿ ತ್ಯಾಜ್ಯವನ್ನು ಸಂಗ್ರಹಣೆ ಮಾಡಿ, ಪುನರ್‌ ಉತ್ಪತ್ತಿಯಾಗುವ ವಸ್ತುಗಳನ್ನು ಉತ್ಪಾದಿಸುವ ಕುರಿತು ಯೋಜನೆ ರೂಪಿಸಬೇಕು ಎಂದರು.

Advertisement

ನಗರ ಬಹಳ ವೇಗವಾಗಿ ಬೆಳೆಯುತ್ತಿದ್ದು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ನಿರ್ವಹಿಸಬೇಕಾದರೆ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವಿದೆ. ನಗರದಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯಗಳ ಸಮರ್ಪಕ ವಿಲೇವಾರಿಗೆ ಪಾಲಿಕೆ ಅಧಿಕಾರಿಗಳು ಸ್ಥಳ ಗುರುತಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸುಭಾಷ ಆಡಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಮುಂಬರುವ ದಿನಗಳಲ್ಲಿ ಇ-ತ್ಯಾಜ್ಯ, ಶೈಕ್ಷಣಿಕ ಸಂಸ್ಥೆಗಳ ಜಾಗೃತಿ ಕಾರ್ಯಕ್ರಮ, ಜೈವಿಕ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಇನ್ನಿತರ ತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಸಭೆ ನಡೆಸಿ, ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿ ಕಾರಿ ರಾಜಶೇಖರ ಪುರಾಣಿಕ, ಪರಿಸರ ಅಧಿ ಕಾರಿ ಜಗದಿಶ ಎ.ಎಚ್‌., ನಗರ ಡಿಸಿಪಿ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಹಾನಿಂಗ ನಂದಗಾಂವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next