ಚಿಕ್ಕಬಳ್ಳಾಪುರ: ತಂಬಾಕು ಉತ್ಪನ್ನಗಳ ಸೇವೆಯಿಂದ ಮನುಷ್ಯನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ವತಿಯಿಂದ ಬೀದಿ ನಾಟಕಗಳ ಪ್ರದರ್ಶನ ಆಯೋಜಿಸಲಾಗಿದೆ.
ಜಿಲ್ಲಾ ಕೇಂದ್ರದ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿಯ ನಿಸರ್ಗ ಟ್ರಸ್ಟ್‌ನ ಕಲಾವಿದರು ತಂಬಾಕು ಉತ್ಪನ್ನಗಳ ಸೇವನೆಯ ಅಪಾಯಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಕ್ಯಾನ್ಸರ್‌ಗೆ ಕಾರಣ: ನಿಸರ್ಗ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ಜ್ಯೋತಿ ನೇತೃತ್ವದಲ್ಲಿ ಟ್ರಸ್ಟ್‌ನ ಕಲಾವಿದರು ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಉಂಟಾಗುವ ತೊಂದರೆಗಳ ಕುರಿತು ಒಂದು ಗಂಟೆಗೂ ಹೆಚ್ಚು ಕಾಲ ಬೀದಿ ನಾಟಕದ ಮೂಲಕ ಅರಿವು ಮೂಡಿಸಿದರು.
ತಂಬಾಕು ಉತ್ಪನ್ನಗಳ ಸೇವನೆ ನಾನಾ ರೀತಿಯ ಕ್ಯಾನ್ಸರ್ ಕಾಯಿಲೆಗಳಿಗೆ, ಹೃದಯ ಸಂಬಂಧಿ ಕಾಯಿಲೆಗಳು ಬರುವುದರಿಂದ ತಂಬಾಕು ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಕಲಾವಿದರು ತಮ್ಮ ನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ನಿಸರ್ಗ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ಜ್ಯೋತಿ ಮಾತನಾಡಿ, ಜಿಲ್ಲಾದ್ಯಂತ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಕುರಿತು ನಾಟಕ ಪ್ರದರ್ಶನ ನೀಡಿ ಅರಿವು ಮೂಡಿಸಲಾಗಿದೆ. ತಂಬಾಕು ಉತ್ಪನ್ನಗಳಿಂದ ಸಮಾಜದ ಮೇಲೆ ವಿಶೇಷವಾಗಿ ಬಡ ಕುಟುಂಬಗಳ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.