ಭಾಲ್ಕಿ: ಬೀದರ ಜಿಲ್ಲೆಯಲ್ಲಿ ಬಿಜೆಪಿ ಮಜಬೂತ್ ಆಗಿ ಬೆಳೆಸಬೇಕಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದ್ದೂ ಈಗಿನಿಂದಲೇ ಕಾರ್ಯಕರ್ತರು ಬಿಜೆಪಿಯನ್ನು ಬೂತ್ ಮಟ್ಟದಿಂದ ಬಲ ಪಡಿಸಲು ಶ್ರಮಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು. ʼ
ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ. ಆದರೆ, ರಾಜ್ಯ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಜಿಲ್ಲೆಯಲ್ಲಿ 6 ಸ್ಥಾನಗಳ ಪೈಕಿ ಕನಿಷ್ಠ 4 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯಬೇಕಿದೆ ಎಂದರು.
ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಮಾತನಾಡಿ, ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಇದು ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ಪಕ್ಷ ನಿಷ್ಠರಿಗೆ ಸದಾ ಗೌರವ ಇದೆ. ಒಬ್ಬ ಕಾರ್ಯಕರ್ತ ಪಕ್ಷದಲ್ಲಿ ಯಾವ ಮಟ್ಟಕ್ಕೆ ಬೆಳೆಯಬಹುದು ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿ. ಮೋದಿ ಅವರು ದೇಶದ ಒಳಿತಿಗಾಗಿ ಕೈಗೊಳ್ಳುತ್ತಿರುವ ನಿರ್ಣಯಗಳಿಗೆ ಇಡೀ ವಿಶ್ವವೇ ಕೊಂಡಾಡುತ್ತಿದೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಯೋಜನೆ ಸೇರಿ ಮುಂತಾದ ಜನಪರ ಯೋಜನೆಗಳು ನೀಡಿರುವ ಹೆಗ್ಗಳಿಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಲ್ಲುತ್ತದೆ ಎಂದರು.
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 6ಕ್ಕೆ 6 ಸ್ಥಾನಗಳನ್ನು ಗೆಲ್ಲಿಸಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪೂರೆ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಬಸವಕಲ್ಯಾಣ ಶಾಸಕ ಶರಣು ಸಲಗರ್, ವಿವಿಧ ನಿಗಮ ಮಂಡಳಿ ಅಧ್ಯಕ್ಷರಾದ ಡಾ| ಶೈಲೇಂದ್ರ ಬೆಲ್ದಾಳೆ, ಬಾಬು ವಾಲಿ, ಮಾರುತಿರಾವ ಮೂಳೆ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ್, ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ, ಸೂರ್ಯಕಾಂತ ನಾಗಮಾರಪಳ್ಳಿ, ಈಶ್ವರಸಿಂಗ್ ಠಾಕೂರ್, ಶಿವರಾಜ ಗಂದಗೆ, ವಿಜಯಕುಮಾರ ಡಾಂಗೆ, ಸೋಮನಾಥ ಪಾಟೀಲ್, ದೀಪಕ ಗಾಯಕವಾಡ್, ವಿದ್ಯಾಸಾಗರ ಶಾಪೂರೆ, ತಾಲೂಕು ಬಿಜೆಪಿ ಅಧ್ಯಕ್ಷ ಪಂಡಿತ ಶಿರೋಳೆ ಇದ್ದರು.