ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಮೂಲಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಇಳಿಕೆಗೆ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಕುರಿತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಪಹರಣ, ದರೋಡೆ, ಕಳ್ಳತನ, ಚಾಕು ಇರಿತ, ಹತ್ಯೆ ಸೇರಿದಂತೆ ಮತ್ತಿತರ ಪ್ರಕರಣಗಳು ಕಂಡುಬರುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.
ನಗರದಲ್ಲಿ ಹಾಡು ಹಗಲೇ ಪೊಲೀಸ್ ಸಿಬಂದಿ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದು ಅಪರಾಧಿಗಳಿಗೆ ಕಾನೂನಿನ ಭಯ ಇಲ್ಲದಿರುವುದು ಕಂಡು ಬರುತ್ತಿದೆ. ಈ ಪ್ರಕರಣದ ಹಿಂದೆ ಕಾಣದ ಕೈಗಳು ಪ್ರಚೋದಿಸುತ್ತಿರುವುದು ಕಂಡು ಬರುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಸೂಚಿಸಿದರು.
ದೇಶ ವಿರೋಧಿ ಘೋಷಣೆಗಳನ್ನು ಕೂಗುವುದು ಹಾಗೂ ಗೋಡೆ ಬರಹಗಳನ್ನು ಬರೆಯುವಂತಹ ಅಪರಾಧಗಳು ಸೇರಿದಂತೆ ಅವರಿಗೆ ಪ್ರಚೋದನೆ ನೀಡುವಂತಹ ವ್ಯಕ್ತಿಗಳನ್ನು ಹತ್ತಿಕ್ಕಲು ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ|ರಾಜೆಂದ್ರ ಕೆ.ವಿ ಮಾತನಾಡಿ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವವರು ಸೇರಿದಂತೆ ಪುನರಾವರ್ತಿತ ಅಪರಾಧ ಪ್ರಕರಣಗಳನ್ನು ಮಾಡುವಂತಹ ವ್ಯಕ್ತಿಗಳನ್ನು ಗುರುತಿಸಿ ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಬೇಕು. ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾದವರು ಕಂಡು ಬಂದರೆ ಗೂಂಡಾ ಪಟ್ಟಿಗೆ ಸೇರಿಸಬೇಕು; ಜತೆಗೆ ಅವರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ವಹಿಸಬೇಕು ಎಂದರು.
ಶಾಸಕ ಡಾ| ವೈ ಭರತ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಲಕ್ಷ್ಮೀ ಪ್ರಸಾದ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ಧರು.
ಹೈವೇ ಪೆಟ್ರೋಲಿಂಗ್ ಹೆಚ್ಚಿಸಿ: ನಳಿನ್ ಸೂಚನೆ
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಸರ್ವಿಸ್ ಅಪಾರ್ಟ್ ಮೆಂಟ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರು ಕೇಳಿಬರುತ್ತಿದೆ. ಇವುಗಳನ್ನು ಪೂರ್ಣ ಪ್ರಮಾಣದಲ್ಲಿ ತಡೆಗಟ್ಟುವ ಕೆಲಸವಾಗಬೇಕು. ಅಲ್ಲದೇ ತಡರಾತ್ರಿ ಖಾಸಗಿ ಸ್ಥಳಗಳಲ್ಲಿ ಅಕ್ರಮವಾಗಿ ಡಿ.ಜೆ. ಪಾರ್ಟಿಗಳು, ಮದ್ಯ ಮಾರಾಟದಂತಹ ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ಸಂಪೂರ್ಣ ಬಂದ್ ಮಾಡಬೇಕು. ಅಪರಾಧಿ ಪ್ರಕರಣಗಳನ್ನು ತಗ್ಗಿಸಲು ರಾತ್ರಿ ಗಸ್ತು, ಹೈವೇ ಪೆಟ್ರೋಲಿಂಗ್ ಹೆಚ್ಚಿಸಬೇಕು ಎಂದರು.